Site icon Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಅಗತ್ಯ ಕ್ರಮ: ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ಭರವಸೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ:
ತಾಲೂಕಿನ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ಭರವಸೆ ನೀಡಿದ್ದಾರೆ.

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಕುಂದಾಪುರ ಶಾಸಕ ಎ. ಕಿರಣ್‌ ಕುಮಾರ್ ಕೊಡ್ಗಿ ಅವರ ಪ್ರಶ್ನೆಗೆ ಸಚಿವರು ಉತ್ತರಿಸಿದರು.

ಕುಂದಾಪುರ ತಾಲೂಕಿನ ಇಎಸ್‌ಐ ಆಸ್ಪತ್ರೆಗೆ ಇಬ್ಬರು ವೈದ್ಯರ ಹುದ್ದೆಯನ್ನು ಮಂಜೂರು ಮಾಡಲಾಗಿತ್ತು. ಆದರೆ 2015ರಿಂದ ಒಬ್ಬರೂ ಖಾಯಂ ವೈದ್ಯರಿಲ್ಲ. ಬೇರೆ ಕಡೆಯಿಂದ ನಿಯೋಜನೆ ಮೇರೆಗೆ ವೈದ್ಯರು ಕರ್ತವ್ಯ ನಿರ್ವಹಿಸುತ್ತಾರೆ. ಇದರಿಂದ ಕಾರ್ಮಿಕರಿಗೆ ಸರಿಯಾದ ಚಿಕಿತ್ಸೆ ಸಿಗದೆ ತೊಂದರೆಯಾಗಿದೆ ಎಂದು ಕಿರಣ್ ಕುಮಾರ್ ಹೇಳಿದರು.

ಕುಂದಾಪುರದ ಇಎಸ್‌ಐ ಆಸ್ಪತ್ರೆಯಲ್ಲಿ ನಿಯೋಜನೆ ಮೇಲೆ ವೈದ್ಯರು ಕಾರ್ಯ ನಿರ್ವಹಿಸುತ್ತಿದ್ದಾರೆ. ಖಾಯಂ ವೈದ್ಯರು ಬೇಕು ಎಂಬ ಬೇಡಿಕೆ ಬಗ್ಗೆ ಪರಿಶೀಲನೆ ಮಾಡಲಾಗುವುದು. ಮೂರು ವಾರದಲ್ಲಿ ತಾತ್ಕಾಲಿಕ ವೈದ್ಯರ ನೇಮಕ ಮಾಡಲಾಗುವುದು ಎಂದು ಸಚಿವ ಸಂತೋಷ್ ಲಾಡ್ ತಿಳಿಸಿದರು.

ಆಸ್ಪತ್ರೆ ಹೆಸರು ಬಿಟ್ಟಿದ್ದರೆ ಕ್ರಮ:
ಇಎಸ್‌ಐ ಫಲಾನುಭವಿಗಳಿಗೆ ಚಿಕಿತ್ಸೆ ನೀಡಲು ಖಾಸಗಿ ಆಸ್ಪತ್ರೆಗಳ ಪಟ್ಟಿಯಲ್ಲಿ ಮಣಿಪಾಲದ ಕಸ್ತೂರರ್ಬಾ ಆಸ್ಪತ್ರೆ ಹಾಗೂ ಕುಂದಾಪುರದ ಆದರ್ಶ ಆಸ್ಪತ್ರೆ ಬಿಟ್ಟು ಹೋಗಿದೆ ಎಂಬ ಕಿರಣ್ ಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಲಾಡ್, ಮಣಿಪಾಲ ಕೆಎಂಸಿ, ಆದರ್ಶ ಆಸ್ಪತ್ರೆ ಬಿಟ್ಟು ಹೋಗಿದ್ದರೆ ನಿಯಮಾವಳಿ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

Exit mobile version