ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಪ್ರತಿಯೊಂದು ಮಗುವಿನ ಹಕ್ಕು ಆಗಿದೆ. ಮಗುವಿಗೆ ಅವಶ್ಯವಿರುವ ಪ್ರೀತಿ ಮತ್ತು ಆರೈಕೆಯನ್ನು ಕುಟುಂಬದ ವಾತಾವರಣವು ಕಲ್ಪಿಸುತ್ತದೆ. ದತ್ತು ಪ್ರಕ್ರಿಯೆ ಕಾನೂನು ಬದ್ಧವಾಗಿ ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ) ತಿದ್ದುಪಡಿ ಕಾಯಿದೆ 2021ರ ಸೆಕ್ಷನ್ 56 (1) 58 ಮತ್ತು 61ರ ಅಡಿಯಲ್ಲಿ ಕುಟುಂಬದ ಪ್ರೀತಿ ವಂಚಿತ, ಪೋಷಕರನ್ನು ಕಳೆದುಕೊಂಡ, ಪಾಲನೆ ಪೋಷಣೆ ವಂಚಿತ ಪರಿತ್ಯಕ್ತ ಹಾಗೂ ನಿರ್ಗತಿಕ ಮಕ್ಕಳು ಮಾತ್ರ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯಿಂದ ದತ್ತು ಮುಕ್ತ ಆದೇಶ ಪಡೆದು ದತ್ತು ನೀಡಲು ಅರ್ಹರಾಗಿರುತ್ತಾರೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹೇಳಿದರು.
ಅವರು ಇತ್ತೀಚೆಗೆ ಮಣಿಪಾಲ ರಜತಾದ್ರಿಯ ತಮ್ಮ ಕಚೇರಿಯಲ್ಲಿ ತಮಿಳುನಾಡು ಮೂಲದ ಇಬ್ಬರು ದಂಪತಿಗಳಿಗೆ ಹಾಗೂ ಹಾಸನ ಮೂಲದ ಓರ್ವ ದಂಪತಿಗಳಿಗೆ ಒಟ್ಟು ಮೂರು ಮಕ್ಕಳ ಅಂತಿಮ ದತ್ತು ಆದೇಶ ನೀಡಿ, ಮಾತನಾಡಿದರು. ದತ್ತು ಪಡೆಯಲು ಇಚ್ಛಿಸುವ ದಂಪತಿಗಳು ಕಾನೂನು ಬದ್ಧವಾಗಿ ದತ್ತು ಪ್ರಕ್ರಿಯೆ ಮೂಲಕ ದತ್ತು ಪಡೆಯಬಹುದಾಗಿದೆ. ಮಗು ಬೇಡವಾದಲ್ಲಿ ಕಸದ ತೊಟ್ಟಿ, ಆಸ್ಪತ್ರೆ ಆವರಣ, ಶೌಚಾಲಯ, ರಸ್ತೆ ಬದಿ ಹಾಗೂ ಪೊದೆಗಳಲ್ಲಿ ಎಸೆಯದೇ ಪರಿತ್ಯಕ್ತ ಮಕ್ಕಳ ರಕ್ಷಣೆಗಾಗಿ ಇರುವ ವಿಶೇಷ ಮಮತೆಯ ತೊಟ್ಟಿಲುಗಳಲ್ಲಿ ಮಕ್ಕಳನ್ನು ಬಿಡಬಹುದಾಗಿದೆ. ಜಿಲ್ಲೆಯಲ್ಲಿ ಸಂತೆಕಟ್ಟೆಯ ಶ್ರೀ ಕೃಷ್ಣಾನುಗೃಹ ದತ್ತು ಕೇಂದ್ರ, ಉಡುಪಿಯ ಬಿ.ಆರ್.ಶೆಟ್ಟಿ ಆಸ್ಪತ್ರೆ ಹಾಗೂ ನಿಟ್ಟೂರು ಸರಕಾರಿ ಬಾಲಕಿಯರ ಬಾಲಮಂದಿರ ಇಲ್ಲಿ ಮಮತೆಯ ತೊಟ್ಟಿಲುಗಳನ್ನು ಇರಿಸಲಾಗಿದೆ ಎಂದರು.
ಕಾನೂನು ಉಲ್ಲಂಘಿಸಿ ಅಥವಾ ಮಕ್ಕಳ ಮಾರಾಟ ಪ್ರಕರಣಗಳಲ್ಲಿ ಆಸ್ಪತ್ರೆ ಸಿಬ್ಬಂದಿಯವರು ಶಾಮೀಲಾಗಿದ್ದಲ್ಲಿ 1 ಲಕ್ಷ ರೂಪಾಯಿ ದಂಡ ಹಾಗೂ 7 ವರ್ಷದವರೆಗೆ ಜೈಲು ಶಿಕ್ಷೆ ಹಾಗೂ ಮಕ್ಕಳನ್ನು ಮಾರಾಟ ಮಾಡಿದವರಿಗೆ ಹಾಗೂ ಮಕ್ಕಳನ್ನು ಕೊಂಡುಕೊಂಡವರಿಗೆ 1 ಲಕ್ಷ ದಂಡ ಹಾಗೂ 5 ವರ್ಷದವರೆಗೆ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ, ರಕ್ಷಣಾಧಿಕಾರಿಗಳಾದ ಮಹೇಶ್, ಸುರಕ್ಷಾ, ಶ್ರೀ ಕೃಷ್ಣಾನುಗೃಹ ದತ್ತು ಕೇಂದ್ರದ ವೃಂದ ಉಪಸ್ಥಿತರಿದ್ದರು.
ದತ್ತು ಪ್ರಕ್ರಿಯೆ ಕುರಿತು ಹಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ https://missionvatsalya.wcd.gov.in, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕಛೇರಿ ದೂರವಾಣಿ ಸಂಖ್ಯೆ: 0820-2574964 ಮತ್ತು ಸಂತೆಕಟ್ಟೆಯ ಶ್ರೀ ಕೃಷ್ಣಾನುಗೃಹ ದತ್ತು ಕೇಂದ್ರ ದೂರವಾಣಿ ಸಂಖ್ಯೆ: 9880442640 ಅನ್ನು ಸಂಪರ್ಕಿಸಬಹುದಾಗಿದೆ.

