Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ
: ದುಶ್ಚಟಗಳಿಗೆ ಬಲಿಯಾದವರು ಜೀವನದಲ್ಲಿ ಎಂದಿಗೂ ಉದ್ಧಾರ ಆಗಲು ಸಾಧ್ಯವಿಲ್ಲ. ಸಹವಾಸ ದೋಷ ಮತ್ತಿತರ ಕಾರಣಗಳಿಂದ ಯುವಕ ಯುವತಿಯರು ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ. ಕ್ಷಣಿಕ ಸುಖಕ್ಕಾಗಿ ಮಾದಕ ದ್ರವ್ಯಗಳನ್ನು ಸೇವಿಸಿ ತಮ್ಮ ಜೀವನವನ್ನೇ ಹಾಳು ಮಾಡಿಕೊಳ್ಳುತ್ತಿದ್ದು, ಮಾದಕ ದ್ರವ್ಯ ಸೇವನೆಯಿಂದ ನಮ್ಮ ಮೇಲಾಗುವ ದುಷ್ಪರಿಣಾಮಗಳ ಬಗ್ಗೆ ಯುವ ಜನಾಂಗಕ್ಕೆ ಅರಿವು ಮೂಡಿಸಬೇಕಿದೆ. ಯುವ ಜನಾಂಗ ಇಂತಹ ದುಶ್ಚಟಗಳಿಗೆ ಬಲಿಯಾಗದಂತೆ ಎಚ್ಚರ ವಹಿಸಿಬೇಕು ಎಂದು ಬೈಂದೂರು ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಸುಧಾಕರ ಆಚಾರ್ಯ ತ್ರಾಸಿ ಹೇಳಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಬೈಂದೂರು ತಾಲೂಕು, ಜನಜಾಗೃತಿ ವೇದಿಕೆ ತ್ರಾಸಿ ವಲಯ ಇದರ ಆಶ್ರಯದಲ್ಲಿ ಗಂಗೊಳ್ಳಿಯ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ಸಹಕಾರದೊಂದಿಗೆ ಗಂಗೊಳ್ಳಿ ಎಸ್.ವಿ. ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು.

ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ರಾಘವೇಂದ್ರ ಶೇರುಗಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಸುಜಾತ ದೇವಾಡಿಗ ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಿದರು. ಜನಜಾಗೃತಿ ವೇದಿಕೆ ಸದಸ್ಯ ಬಿ.ರಾಘವೇಂದ್ರ ಪೈ ಮತ್ತು ಸ್ವಸಹಾಯ ಸಂಘಗಳ ತ್ರಾಸಿ ವಲಯ ಒಕ್ಕೂಟದ ಅಧ್ಯಕ್ಷೆ ಪ್ರಮೀಳಾ ಗಾಣಿಗ ಶುಭ ಹಾರೈಸಿದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸೇವಾ ಪ್ರತಿನಿಧಿ ಸರಸ್ವತಿ ಉಪಸ್ಥಿತರಿದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತ್ರಾಸಿ ವಲಯ ಮೇಲ್ವಿಚಾರಕ ಚಂದ್ರು ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.

Exit mobile version