Site icon Kundapra.com ಕುಂದಾಪ್ರ ಡಾಟ್ ಕಾಂ

ಕಟಪಾಡಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಟ್ರಾಫಿಕ್ ಜಾಮ್

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕುಂದಾಪುರ, ಮಾ.16:
ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರೊಂದು ಪಲ್ಟಿಯಾಗಿ ಹೆದ್ದಾರಿಗೆ ಅಡ್ಡಲಾಗಿ ಮಗುಚಿಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಜಂಕ್ಷನ್ ಸಮೀಪ ಸೋಮವಾರ ಸಂಭವಿಸಿದೆ.

ಅಪಘಾತದ ಪರಿಣಾಮ ಟ್ಯಾಂಕರ್‌ನಿಂದ ಅನಿಲ ಸೋರಿಕೆ ಸಂಭವಿಸಬಹುದೆಂಬ ಭೀತಿಯಿಂದ ಸ್ಥಳೀಯರಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.

ಘಟನೆ ಹಿನ್ನೆಲೆಯಲ್ಲಿ ಕಟಪಾಡಿ ಜಂಕ್ಷನ್ ಬಳಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿ ಹೆದ್ದಾರಿಯಲ್ಲಿ ವಾಹನಗಳು ದೀರ್ಘ ಸಾಲಿನಲ್ಲಿ ನಿಂತಿರುವ ದೃಶ್ಯ ಕಂಡುಬಂದಿತು.

ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಕಾರ್ಯಾಚರಣೆ ನಡೆಸಿದರು. ಇದೇ ವೇಳೆ ಕಾಪು ಪೊಲೀಸ್ ಠಾಣೆಯ ಪಿಎಸ್‌ಐ ಹಾಗೂ ಪೊಲೀಸ್ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಭದ್ರತಾ ಕ್ರಮಗಳನ್ನು ಕೈಗೊಂಡು ವಾಹನ ಸಂಚಾರವನ್ನು ನಿಯಂತ್ರಿಸಿದರು.

ಅಪಘಾತದ ನಿಖರ ಕಾರಣ ತಿಳಿದುಬಂದಿಲ್ಲ. ಈ ಕುರಿತು ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

Exit mobile version