ಕುಂದಾಪ್ರ ಡಾಟ್ ಕಾಂ ಸುದದಿ.
ಕುಂದಾಪುರ: ಕೃತಕ ಬುದ್ಧಿಮತ್ತೆ ಚಾಲ್ತಿಯಲ್ಲಿರುವ ಇಂದಿನ ಕಾಲಘಟ್ಟದಲ್ಲಿ, ವಿದ್ಯಾರ್ಥಿಗಳಲ್ಲಿ ಸಂವೇದನಾ ಶೀಲತೆಯನ್ನು ಬೆಳೆಸಬೇಕಾಗಿರುವುದು ಅತ್ಯಂತ ಅಗತ್ಯ. ವಿದ್ಯಾರ್ಥಿಗಳನ್ನು ಆಂತರಿಕವಾಗಿ ಮತ್ತು ಭಾವನಾತ್ಮಕವಾಗಿ ಗಟ್ಟಿಗೊಳಿಸಲು ಸಾಹಿತ್ಯದ ಓದು ಮತ್ತು ಬರವಣಿಗೆ ಉಪಯೋಗಕಾರಿ. ಸಾಹಿತ್ಯ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ನಿರಂತರವಾಗಿ ತೊಡಗಿಕೊಂಡರೆ ಭವಿಷ್ಯದಲ್ಲಿ ಮೌಲ್ಯಯುತ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯ ಎಂದು ಕನ್ನಡ ಸಾಹಿತ್ಯ ಪರಿಷತ್ ಕುಂದಾಪುರ ತಾಲೂಕು ಘಟಕದ ಅಧ್ಯಕ್ಷ ಹಾಗೂ ಚಿನ್ಮಯಿ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ. ಉಮೇಶ್ ಪುತ್ರನ್ ಹೇಳಿದರು.
ಅವರು ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್, ಡಾ| ಶಿವರಾಮ ಕಾರಂತ ಪ್ರತಿಷ್ಠಾನ ಕಾರಂತ ಥೀಮ್ ಪಾರ್ಕ್, ಕೋಟ ಇವರ ಸಹಯೋಗದೊಂದಿಗೆ ಸಾಹಿತ್ಯಾಸಕ್ತ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ‘ಬರವಣಿಗೆ ಕೌಶಲ’ ಎನ್ನುವ ವಿಷಯದ ಕುರಿತ ಒಂದು ದಿನದ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲರಾದ ಡಾ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ನ ಕಾರ್ಯದರ್ಶಿ ದಿನಕರ್ ಆರ್. ಶೆಟ್ಟಿ ಆಶಯ ನುಡಿಗಳನ್ನಾಡಿದರು.
ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ನ ಕಾರ್ಯದರ್ಶಿ ಅಕ್ಷತಾ ಗಿರೀಶ್, ಕೋಶಾಧಿಕಾರಿ ಕೆ.ಎಸ್. ಮಂಜುನಾಥ್ ಉಪಸ್ಥಿತರಿದ್ದರು.
ಉಪ-ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯಕ್ರಮ ಸಂಯೋಜಕಿ ರೇಷ್ಮಾ ಶೆಟ್ಟಿ ಅತಿಥಿಗಳನ್ನು ಪರಿಚಯಿಸಿದರು. ಪ್ರವೀಣಾ ಎಂ. ಪೂಜಾರಿ ಕಾರ್ಯಕ್ರಮ ನಿರೂಪಿಸಿ, ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ರಶ್ಮಿತಾ ಶೆಟ್ಟಿ ವಂದಿಸಿದರು.