ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ಬಿದ್ಕಲ್ಕಟ್ಟೆಯಲ್ಲಿ ನಿರ್ಮಿಸಲಾದ ಹಾರ್ದಳ್ಳಿ-ಮಂಡಳ್ಳಿ ಗ್ರಾಮ ಪಂಚಾಯತ್ ಕಾರ್ಯಾಲಯದ ನೂತನ ಕಟ್ಟಡವನ್ನು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮಂಗಳವಾರ ಉದ್ಘಾಟಿಸಿದರು.
ಈ ವೇಳೆ ಅವರು ಮಾತನಾಡಿ, ಪ್ರಸ್ತುತ ದೇಶದಲ್ಲಿ ಮಹಿಳೆಯರು ರಾಜಕೀಯ, ಆರ್ಥಿಕಸಬಲೀಕರಣದತ್ತ ಮುಖ ಮಾಡಿದ್ದರೇ, ಗ್ರಾಮ ಪಂಚಾಯತಿಗಳ ಮೂಲಕ ಹಳ್ಳಿಗಳ ಸುಧಾರಣೆ ಸಾಧ್ಯವಾಗಿದ್ದರೇ ಅದಕ್ಕೆ ರಾಜೀವ ಗಾಂಧಿಯ ಅವರು ಅಧಿಕಾರ ವಿಕೇಂದ್ರೀಕರಣ ಹಾಗೂ ಮಹಿಳಾ ಮೀಸಲಾತಿಯ ಕೊಡುಗೆ ದೊಡ್ಡದಿದೆ ಎಂದರು.
ಅಧಿಕಾರದಲ್ಲಿದ್ದವರು ರಾಜಕಾರಣ ಮಾಡಬಾರದು ಎಂಬುದನ್ನು ಕೇವಲ ಭಾಷಣಕ್ಕಷ್ಟೇ ಸೀಮಿತವಾಗಿಸದೇ ಬದಕಿನಲ್ಲಿ ಅಳವಡಿಸಿಕೊಳ್ಳುವ ಕೆಲಸ ಮಾಡಿದರೆ ಊರು ಅಭಿವೃದ್ಧಿಯಾಗುತ್ತದೆ. ಸರಕಾರವೆಂಬುದು ಜನರ ಸೊತ್ತು. ಸರಕಾರದ ಯೋಜನೆಗಳು ಹೆಚ್ಚು ಪ್ರಮಾಣದಲ್ಲಿ ಜನರಿಗೆ ತಲುಪುವಂತೆ ಮಾಡುವುದು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದರು.
ಜಿಲ್ಲೆಯ ಅಭಿವೃದ್ಧಿ ಕುರಿತಂತೆ ಎಲ್ಲಾ ಶಾಸಕರೊಂದಿಗೆ ಚರ್ಚಿಸಿ ಯೋಜನೆಗಳನ್ನು ಜಾರಿಗೆ ತರಲಾಗುವುದು. ಪ್ರಸ್ತುತ ನಮ್ಮ ಸರ್ಕಾರ ಜಾರಿಗೆ ತಂದಿರುವ 5 ಗ್ಯಾರಂಟಿ ಯೋಜನೆಗಳ ಪ್ರಯೋಜನವನ್ನು ಜಿಲ್ಲೆಯ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸದುಪಯೋಗ ಪಡಿಸಿಕೊಳ್ಳುವಂತೆ ಸಚಿವರು ಹೇಳಿದರು.
ಇದೇ ಸಂದರ್ಭದಲ್ಲಿ, ಇತ್ತೀಚೆಗೆ ಬೈಂದೂರು ನಲ್ಲಿ ನಡೆದ ಮೀನುಗಾರಿಕೆ ದುರಂತದಲ್ಲಿ ಮೃತಪಟ್ಟ ಸತೀಶ್ ಖಾರ್ವಿ ಕುಟುಂಬ ಕ್ಕೆ ಮೀನುಗಾರಿಕೆ ಇಲಾಖೆ ವತಿಯಿಂದ ನೀಡುವ ಪರಿಹಾರದ ಚೆಕ್ ನ್ನು ಸಚಿವರು ವಿತರಿಸಿದರು.
ಕಾರ್ಯಕ್ರಮದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿ, ವಿಧಾನ ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ ಹಾಕೆ, ಜಿಲ್ಲಾ ಪಂಚಾಯತ್ ಸಿಇಒ ಎಚ್. ಪ್ರಸನ್ನ, ಉಪ ವಿಭಾಗಧಿಕಾರಿ ರಶ್ಮಿ,, ತಾಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭಾರತಿ, ಕಾಂಗ್ರೆಸ್ ಮುಖಂಡರಾದ ದಿನೇಶ್ ಹೆಗ್ಡೆ ಮೊಳಹಳ್ಳಿ, ಮುನಿಯಾಲು ಉದಯಕುಮಾರ್ ಶೆಟ್ಟಿ, ಹಾರ್ದಳ್ಳಿ ಮಂಡಳ್ಳಿ ಗ್ರಾಪಂ ಅಧ್ಯಕ್ಷ ಜಗನ್ನಾಥ ಶೆಟ್ಟಿ ಚಿಟ್ಟೆಬೈಲು, ಉಪಾಧ್ಯಕ್ಷೆ ರೇಖಾ ಹಾಗೂ ಪಂಚಾಯತ್ ಸದಸ್ಯರುಗಳು ಉಪಸ್ಥಿತರಿದ್ದರು.
ಈ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಸನ್ಮಾನಿಸಲಾಯಿತು. ಬಿದ್ಕಲ್ಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಶಿಕ್ಷಕ ಸತೀಶ್ ಶೆಟ್ಟಿಗಾರ್ ಸ್ವಾಗತಿಸಿ, ಅಕ್ಷಯ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.



















