ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೆಂಗಳೂರು: ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ರಿ. ಬೆಂಗಳೂರು ಮತ್ತು ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ 30ನೇ ವಿಶ್ವ ಆದಿವಾಸಿ ದಿನಾಚರಣೆ ಮತ್ತು ಆದಿವಾಸಿ ಸಿರಿ ಪ್ರಶಸ್ತಿ ಪ್ರಧಾನ ಸಮಾರಂಭವು ದಾವಣಗೆರೆಯ ಮಲ್ಲಿಕಾರ್ಜುನ ಕಲ್ಯಾಣ ಮಂದಿರದಲ್ಲಿ ನಡೆಯಿತು.
ಆದಿವಾಸಿ ಸಿರಿ ಪ್ರಶಸ್ತಿಯನ್ನು ಕೊರಗ ಸಮುದಾಯದವರಾದ ಡಾ. ಸಬಿತಾ ಗುಂಡ್ಮಿ , ಡಾ. ದಿನಕರ ಕೆಂಜೂರು ಮತ್ತು ಡಾ. ಕಲಾವತಿ ಸೂರಾಲು ಅವರಿಗೆ ಪ್ರದಾನಿಸಲಾಯಿತು.
30ನೇ ವಿಶ್ವ ಆದಿವಾಸಿ ದಿನಾಚರಣೆ ಮತ್ತು ಆದಿವಾಸಿ ಸಿರಿ ಪ್ರಶಸ್ತಿ ಪ್ರಧಾನ ಸಮಾರಂಭದ ವೇದಿಕೆಯಲ್ಲಿ ಶ್ರೀ ಸಿದ್ದರಾಮಾನಂದ ಮಹಾಸ್ವಾಮಿಗಳು ಶ್ರೀ ಕಾಗಿನೆಲೆ ಕನಕ ಗುರು ಪೀಠ ರಾಯಚೂರು, ವಿಧಾನ ಪರಿಷತ್ ಸದಸ್ಯರಾದ ಶಾಂತರಾಮ್ ಸಿದ್ದಿ, ಹರಿಹರ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಿ. ಪಿ. ಹರೀಶ್, ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಬುಡಕಟ್ಟು ಅಧ್ಯಯನ ವಿಭಾಗದ ಮುಖ್ಯಸ್ಥರಾದ ಡಾ. ಕೆ. ಎಂ. ಮೈತ್ರಿ, ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ರಿ. ಬೆಂಗಳೂರು ಇದರ ರಾಜ್ಯಾಧ್ಯಕ್ಷರಾದ ಎಂ. ಕೃಷ್ಣಯ್ಯ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಪಿ.ರಾಜೇಶ್ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಡಾ. ಸಬಿತಾ ಗುಂಡ್ಮಿ ಅವರು ಪಿ. ವಿ. ಟಿ. ಜಿ ಬುಡಕಟ್ಟು ಸಮುದಾಯದ ಮಹಿಳೆಯರಲ್ಲಿ ಡಾಕ್ಟರೇಟ್ ಪದವಿ ಪಡೆದವರಲ್ಲಿ ಪ್ರಥಮ ಮಹಿಳೆಯಾಗಿರುತ್ತಾರೆ. ಅವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಸರಕಾರಿ ಪ್ರಾಥಮಿಕ ಶಾಲೆ ಗುಂಡ್ಮಿ, ಹೈಸ್ಕೂಲ್ ಶಿಕ್ಷಣವನ್ನು ಸರಕಾರಿ ಪ್ರೌಢಶಾಲೆ ಬ್ರಹ್ಮಾವರ, ಪದವಿ ಪೂರ್ವ ಶಿಕ್ಷಣವನ್ನು ಸೈಂಟ್ ಮೇರಿಸ್ ಕಾಲೇಜು ಶಿರ್ವ ಮತ್ತು ಪದವಿ ಶಿಕ್ಷಣವನ್ನು ಬೆಸೆಂಟ್ ಮಹಿಳಾ ಕಾಲೇಜು ಮಂಗಳೂರಿನಲ್ಲಿ ಮುಗಿಸಿದರು. ನಂತರ ಮಂಗಳೂರು ವಿಶ್ವವಿದ್ಯಾನಿಲಯದ ಸಮಾಜಶಾಸ್ತ್ರ ವಿಭಾಗದಲ್ಲಿ ಎಂ. ಎ ಪದವಿಯನ್ನು ದ್ವಿತೀಯ ರ್ಯಾಕ್‍ನೊಂದಿಗೆ ಅತ್ಯುನ್ನತ ಶ್ರೇಣಿಯಲ್ಲಿ ಮುಗಿಸಿರುತ್ತಾರೆ. ನಂತರ ಮಂಗಳೂರು ವಿಶ್ವವಿದ್ಯಾನಿಲಯದ ಪ್ರೊ. ಜೋಗನ್ ಶಂಕರ್ ಅವರ ಮಾರ್ಗದರ್ಶನದಲ್ಲಿ ಡಾಕ್ಟರೇಟ್ ಪದವಿಯನ್ನು ಪಡೆದರು. ಪ್ರಸ್ತುತ ಡಾ.ಸಬಿತಾ ಗುಂಡ್ಮಿ ಅವರು ಮಂಗಳೂರು ವಿಶ್ವವಿದ್ಯಾನಿಲಯದ ಸಮಾಜಶಾಸ್ತ್ರ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಡಾ. ದಿನಕರ ಕೆಂಜೂರು ಅವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಶ್ರೀ ವೀರೇಶ್ವರ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಕೆಂಜೂರು, ಹೈಸ್ಕೂಲ್ ಮತ್ತು ಪದವಿಪೂರ್ವ ಶಿಕ್ಷಣವನ್ನು ಸರಕಾರಿ ಪದವಿ ಪೂರ್ವ ಕಾಲೇಜು ಕೊಕ್ಕರಣೆಯಲ್ಲಿ ಪೂರೈಸಿರುತ್ತಾರೆ. ಪದವಿ ಶಿಕ್ಷಣವನ್ನು ಸೈಂಟ್ ಮೇರಿಸ್ ಕಾಲೇಜು ಶಿರ್ವದಲ್ಲಿ ಮುಗಿಸಿರುತ್ತಾರೆ. ನಂತರ ಮಂಗಳೂರು ವಿಶ್ವವಿದ್ಯಾನಿಲಯದ ವಾಣಿಜ್ಯ ವಿಭಾಗದಲ್ಲಿ ಎo. ಕಾo ಪದವಿ ಪಡೆದಿರುತ್ತಾರೆ ಹಾಗೂ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮೈಸೂರಿನಲ್ಲಿ ಎಂ. ಬಿ. ಎ ಪದವಿಯನ್ನು ಪಡೆದಿರುತ್ತಾರೆ. ನಂತರ ಮಂಗಳೂರು ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರಾದ ಪ್ರೊಫೆಸರ್ ಪಿ .ಎಸ್. ಯಡಪಡಿತ್ತಾಯ ಅವರ ಮಾರ್ಗದರ್ಶನದಲ್ಲಿ ಡಾಕ್ಟರೇಟ್ ಪದವಿಯನ್ನು ಪಡೆದಿರುತ್ತಾರೆ. ಪ್ರಸ್ತುತ ಡಾ. ದಿನಕರ ಕೆಂಜೂರು ಅವರು ಮಂಗಳೂರು ವಿಶ್ವವಿದ್ಯಾನಿಲಯದ ವಾಣಿಜ್ಯಶಾಸ್ತ್ರ ವಿಭಾಗದಲ್ಲಿ ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಡಾ. ಕಲಾವತಿ ಸೂರಾಲು ಅವರು ಪ್ರಾಥಮಿಕ ಶಿಕ್ಷಣವನ್ನು ಹಿರಿಯ ಪ್ರಾಥಮಿಕ ಶಾಲೆ ಸೂರಾಲಿನಲ್ಲಿ, ಪ್ರೌಢಶಾಲಾ ಶಿಕ್ಷಣವನ್ನು ಸರಕಾರಿ ಪದವಿ ಪೂರ್ವ ಕಾಲೇಜು ಕೊಕ್ಕರಣೆ ಮತ್ತು ಸೈಂಟ್ ಮೇರಿಸ್ ಕಾಲೇಜು ಶಿರ್ವದಲ್ಲಿ ಪದವಿ ಪೂರ್ವ ಶಿಕ್ಷಣವನ್ನು ಪೂರೈಸಿರುತ್ತಾರೆ. ಪದವಿ ಶಿಕ್ಷಣವನ್ನು ರೋಶನಿ ನಿಲಯ ಮಂಗಳೂರಿನಲ್ಲಿ ಮುಗಿಸಿರುತ್ತಾರೆ. ನಂತರ ಹಂಪಿ ವಿಶ್ವವಿದ್ಯಾನಿಲಯದಲ್ಲಿ ಸಮಾಜಶಾಸ್ತ್ರ ಅಧ್ಯಯನ ಮತ್ತು ಡಾಕ್ಟರೇಟ್ ಪದವಿಯನ್ನು ಪಡೆದಿರುತ್ತಾರೆ. ಪ್ರಸ್ತುತ ಡಾ. ಕಲಾವತಿ ಸೂರಾಲು ಮೈಸೂರಿನ ಬುಡಕಟ್ಟು ಸಂಶೋಧನಾ ಸಂಸ್ಥೆಯಲ್ಲಿ ಸಂಶೋಧನಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
















