ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ 76ನೇ ಗಣರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು.
ಶೆಪ್ಟಾಕ್ ಫುಡ್ ಮತ್ತು ಹಾಸ್ಪಿಟಾಲಿಟಿ ಸರ್ವಿಸಸ್ ಪ್ರೈ. ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಗೋವಿಂದ ಬಾಬು ಪೂಜಾರಿ ಹಾಗೂ ಕುಂದಾಪುರ ಚಿನ್ಮಯಿ ಆಸ್ಪತ್ರೆಯ ಆರ್ಥೋಪೆಡಿಕ್ ಶಸ್ತ್ರ ಚಿಕಿತ್ಸಕರಾದ ಡಾ. ದಿನೇಶ್ ಕುಮಾರ್ ಶೆಟ್ಟಿ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಧ್ವಜಾರೋಹಣ ಮಾಡಿ, ವಿದ್ಯಾರ್ಥಿಗಳಿಂದ ಗೌರವ ವಂದನೆ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಡಾ. ಗೋವಿಂದ ಬಾಬು ಪೂಜಾರಿ ಸಭೆಯನ್ನುದ್ದೇಶಿಸಿ ಮಾತನಾಡಿ, ಯಾವುದೇ ಕಾರ್ಯ ಸುಗಮವಾಗಿ ಸಾಗಬೇಕಾದರೆ ವ್ಯವಸ್ಥಿತ ಯೋಜನೆ ಅಗತ್ಯ. ಹಾಗೆಯೇ ದೇಶದ ಕಾರ್ಯ ಚಟುವಟಿಕೆಗಳು ವ್ಯವಸ್ಥಿತವಾಗಿ ಸಾಗುವಲ್ಲಿ ಸಂವಿಧಾನ ಅತ್ಯಗತ್ಯ. ವ್ಯವಸ್ಥಿತ ಸಂವಿಧಾನವನ್ನು ರೂಪಿಸುವಲ್ಲಿ ಈ ದೇಶದ ಹಲವಾರು ಮಹನೀಯರ ಕೊಡುಗೆಯಿದೆ. ಅವರೆಲ್ಲ ಕೊಡುಗೆಗಳನ್ನು ಸ್ಮರಿಸಬೇಕಾದುದು ನಮ್ಮೆಲ್ಲರ ಕರ್ತವ್ಯವಾಗಿದೆ. ಜೀವನದಲ್ಲಿ ಯಶಸ್ಸನ್ನು ಗಳಿಸುವುದರೊಂದಿಗೆ ದೇಶದ ಪ್ರಗತಿಯತ್ತಲೂ ನಾವೆಲ್ಲ ಚಿತ್ತ ಹರಿಸಬೇಕು. ದೇಶದಲ್ಲಿನ ಜನರ ಕಷ್ಟಗಳನ್ನು ಪರಿಹರಿಸಲು ಪ್ರಯತ್ನಿಸಬೇಕು. ವಿದ್ಯಾರ್ಥಿಗಳು ಉತ್ತಮ ವಿದ್ಯಾಭ್ಯಾಸವನ್ನು ಪಡೆದು, ತಂದೆ- ತಾಯಿಯ, ಕಲಿತ ಶಾಲೆಯ ಮತ್ತು ದೇಶದ ಕೀರ್ತಿಯನ್ನು ಎತ್ತರಕ್ಕೇರಿಸಲು ಶ್ರಮಿಸಬೇಕು ಎಂದು ಕರೆಕೊಟ್ಟರು.
ಡಾ. ದಿನೇಶ್ ಕುಮಾರ್ ಶೆಟ್ಟಿ ಅವರು ಮಾತನಾಡಿ, ಇಂದು ನಾವೆಲ್ಲ ದೇಶಕ್ಕೆ ಶ್ರದ್ಧೆ, ನಿಷ್ಠೆ ಮತ್ತು ಪ್ರಾಮಾಣಿಕತೆಯನ್ನು ಸಲ್ಲಿಸಬೇಕಾದ ದಿನ. ಈ ದಿನ ದೇಶಕ್ಕೊಂದು ನಿರ್ದಿಷ್ಟ ಕಾನೂನಿನ ಚೌಕಟ್ಟನ್ನು ಒದಗಿಸಿದ ದಿನ. ನಮ್ಮ ಸಂವಿಧಾನವು ವಿಶ್ವದ ಬೃಹತ್ ಸಂವಿಧಾನವಾಗಿದ್ದು, ಹಲವಾರು ದೇಶಗಳ ಸಂವಿಧಾನವನ್ನು ಅಭ್ಯಸಿಸಿ, ನಮ್ಮ ಸಂವಿಧಾನವನ್ನು ರಚಿಸಲಾಗಿದೆ. ನಮ್ಮ ಸಂವಿಧಾನವು ದೇಶದ ಜನತೆಗೆ ಹಲವಾರು ಹಕ್ಕುಗಳನ್ನು ನೀಡಿದ್ದು, ಆ ಸಂವಿಧಾನವನ್ನು ಕಾಪಾಡುವುದು, ಸಂವಿಧಾನದ ಧ್ಯೇಯೋದ್ದೇಶಗಳನ್ನು ಎತ್ತಿ ಹಿಡಿಯುವುದು ಭಾರತೀಯರ ಕರ್ತವ್ಯವಾಗಿರಬೇಕು. ದೇಶಕ್ಕಾಗಿ ಯಾವುದೇ ಬಗೆಯ ತ್ಯಾಗಕ್ಕೂ ನಾವು ಸಿದ್ಧರಾಗಿರಬೇಕು ಎಂದು ತಿಳಿಸಿಕೊಟ್ಟರು.
ಇದೇ ಸಂದರ್ಭದಲ್ಲಿ ಸಾಮಾಜಿಕ, ಧಾರ್ಮಿಕ ಮತ್ತು ಶೈಕ್ಷಣಿಕ ಕ್ಷೇತ್ರಗಳಿಗೆ ಅಪಾರ ಕೊಡುಗೆ ನೀಡಿರುವ ಡಾ. ಗೋವಿಂದ ಬಾಬು ಪೂಜಾರಿಯವರಿಗೆ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ವತಿಯಿಂದ ಸನ್ಮಾನಿಸಲಾಯಿತು. ಉಪ ಪ್ರಾಂಶುಪಾಲರಾದ ರಾಮ ದೇವಾಡಿಗ ಸನ್ಮಾನ ಪತ್ರವನ್ನು ವಾಚಿಸಿದರು.
ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳೂ ಮತ್ತು ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಪ್ರಾಂಶುಪಾಲರಾದ ಶರಣ ಕುಮಾರರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಆಡಳಿತಾಧಿಕಾರಿ ವೀಣಾ ರಶ್ಮೀ ಎಂ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಸುಜಾತ ಸದಾರಾಮ್, ಶಿಕ್ಷಕ-ಶಿಕ್ಷಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಆಕರ್ಷಕ ಪಥಸಂಚಲನ, ದೇಶಭಕ್ತಿಯನ್ನು ಮೂಡಿಸುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಎಲ್ಲರ ಗಮನ ಸೆಳೆಯಿತು. ಸಾನ್ವಿ ಎಸ್. ಜಿ. ಕಾರ್ಯಕ್ರಮಕ್ಕೆ ಸರ್ವರನ್ನು ಸ್ವಾಗತಿಸಿದರು. ದಿವ್ಯಾ ಎ. ಕೆ. ಕಾರ್ಯಕ್ರಮ ನಿರೂಪಿಸಿ, ತನುಶ್ರೀ ಎಸ್. ಡೆಂಗಿ ವಂದಿಸಿದರು.















