ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು: ಮಹಿಳೆಯೊಬ್ಬರಿಗೆ ಜಾತಿ ನಿಂದನೆ ಮಾಡಿ ಮಾನಹಾನಿ ಎಸಗಿದ ಆರೋಪದಡಿ ಯುವಕನ ವಿರುದ್ಧ ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿರುವ ಕೊಲ್ಲೂರು ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ.ಬಂಧಿತ ಸನತ್ ಕುಂದಾಪುರ ಎಂಬಾತನಾಗಿದ್ದಾರೆ.
ಘಟನೆಗೆ ಸಂಬಂಧಿಸಿ ಆರೋಪಿ ಯುವಕನ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಪ್ರತ್ಯೇಕ ಪ್ರಕರಣ ದಾಖಲಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.ಬಂಧಿತರು ರಾಮ ಕುಮಾರ್ ಮತ್ತು ನಂದೀಶ್ ಕುಮಾರ್ ಎಂಬವರಾಗಿದ್ದಾರೆ.
ಆಗಸ್ಟ್ 6ರಂದು ಕೊಲ್ಲೂರು ಪೊಲೀಸ್ ಠಾಣೆ ವ್ಯಾಪ್ತಿಯ ಬೆಳ್ಳಾಲ ಗ್ರಾಮದಲ್ಲಿ ನಡೆದ ಘಟನೆಗೆ ಸಂಬಂಧಿಸಿ ನೊಂದ ಮಹಿಳೆ ಠಾಣೆಗೆ ನೀಡಿದ ದೂರಿನ ಮೇರೆಗೆ, ಸನತ್ ಮಹಿಳೆಯ ಮನೆಯ ಸಮೀಪ ಬಂದು ಮಾನಕ್ಕೆ ಕುಂದುಂಟಾಗುವ ರೀತಿಯಲ್ಲಿ ವರ್ತಿಸಿದ್ದಲ್ಲದೆ ಜಾತಿ ನಿಂದನೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.
ಈ ದೂರಿನ ಆಧಾರದ ಮೇಲೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಲಾಗಿದೆ.
ಇದೇ ವೇಳೆ, ಘಟನೆ ನಡೆದ ಸಂದರ್ಭದಲ್ಲಿ ಮಹಿಳೆಯ ಕುಟುಂಬಸ್ಥರು ತನ್ನನ್ನು ಕಟ್ಟಿ ಹಲ್ಲೆ ನಡೆಸಿ ಕೊಲೆ ಯತ್ನ ನಡೆಸಿದ್ದಾರೆ ಎಂದು ಸನತ್ ಕುಂದಾಪುರ ನೀಡಿದ ದೂರಿನ ಮೇರೆಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಸೇರಿದಂತೆ ವಿವಿಧ ಬಿಎನ್‌ಎಸ್ ಕಲಂಗಳಡಿ ಮತ್ತೊಂದು ಪ್ರಕರಣ ದಾಖಲಾಗಿದೆ.ಈ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಎರಡೂ ಪ್ರಕರಣಗಳ ತನಿಖೆ ಮುಂದುವರಿದಿದೆ. ತನಿಖೆ ಪೂರ್ಣಗೊಂಡ ಬಳಿಕ ಉಳಿದ ಆರೋಪಿಗಳನ್ನು ಶೀಘ್ರವೇ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
















