ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಘಟಕ ಆಶ್ರಯದಲ್ಲಿ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ ವೀರಾ ರಾಜೇಂದ್ರ ಹೆಗ್ಡೆ ಸಭಾಂಗಣದಲ್ಲಿ ಜರುಗಿತು.
ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ನಿಟ್ಟೆ ವಿಶ್ವ ವಿದ್ಯಾನಿಲಯದ ಭಾರತೀಯ ಜ್ಞಾನ ವ್ಯವಸ್ಥೆ ಕೇಂದ್ರ, ನಿಟ್ಟೆ ಇಲ್ಲಿನ ಪ್ರಾಧ್ಯಾಪಕರು ಮತ್ತು ನಿರ್ದೇಶಕರು, ಡಾ. ಸುಧೀರ ರಾಜ್ ಕೆ., ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ಇಂದಿನ ವೇಗವಾಗಿ ಬದಲಾಗುತ್ತಿರುವ ಜಗತ್ತಿನಲ್ಲಿ ಕೇವಲ ಪುಸ್ತಕದ ಜ್ಞಾನವನ್ನು ಹೊಂದಿರುವುದು ಸಾಕಾಗುವುದಿಲ್ಲ. ವಿದ್ಯಾರ್ಥಿಗಳು ತಮ್ಮ ಜ್ಞಾನವನ್ನು ಪ್ರಾಯೋಗಿಕವಾಗಿ ಬಳಸುವ ಸಾಮರ್ಥ್ಯ ಸಂವಹನ ಕೌಶಲ್ಯ ಸೃಜನಶೀಲತೆ ನಾಯಕತ್ವ ಮತ್ತು ಸಮಸ್ಯೆ ಪರಿಹರಿಸುವ ಸಾಮರ್ಥ್ಯ ಬೆಳಸಿಕೊಳ್ಳುವುದು ಅತೀ ಅಗತ್ಯ.
ಭಾರತೀಯ ಜ್ಙಾನ ವ್ಯವಸ್ಥೆಯು ಅನುಭವ ಮೌಲ್ಯ ಮತ್ತು ಪ್ರಾಯೋಗಿಕ ಕಲಿಕೆಗೆ ಮಹತ್ವ ನೀಡುತ್ತದೆ. ಆದ್ದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಜ್ಞಾನವನ್ನು ಪ್ರಾಯೋಗಿಕ ಕೌಶಲ್ಯಗಳೊಂದಿಗೆ ಸಂಪರ್ಕಿಸಬೇಕಾದರೆ ಇಂತಹ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಆಳವಾದ ಪರಿಣಿತಿಯನ್ನು ಬೆಳೆಸಿಕೊಂಡು ಮತ್ತು ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಂಡರೆ ವಿದ್ಯಾರ್ಥಿಗಳು ಭವಿಷ್ಯದ ಸವಾಲುಗಳನ್ನು ಸಮರ್ಥವಾಗಿ ಎದುರಿಸಬಹುದು ಎಂದರು.
ಕಾರ್ಯಕ್ರಮದ ಅಧ್ಯಕ್ಷ್ಯತೆಯನ್ನು ಡಾ. ದಯಾನಂದ ಬಾಯರ್ ನಿರ್ವಹಿಸಿದರು. ಕಾಲೇಜಿನ ಆಡಳಿತ ಅಧಿಕಾರಿ ಡಾ. ಮೋಹನ್ ಕೆ.ಎನ್. ಉಪಸ್ಥಿತಿರಿದ್ದರು.
ಕಾರ್ಯಕ್ರಮದ ಸಂಯೋಜಕ ಡಾ. ವಿಶ್ವನಾಥ ಆಚಾರ್ಯ ಸ್ವಾಗತಿಸಿ, ಉಪನ್ಯಾಸಕಿ ಶ್ವೇತಾ ಕಾರ್ಯಕ್ರಮ ನಿರೂಪಿಸಿದರು.
















