ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ವಿದ್ಯಾರ್ಥಿ ಪರಿಷತ್ತು ಉದ್ಘಾಟನಾ ಸಮಾರಂಭ ಕಾಲೇಜು ಸಭಾಂಗಣದಲ್ಲಿ ಜರುಗಿತು.
ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ಆಗಮಿಸಿದ ಎನ್. ಕೆ.ಕೆ.ಸಿ ಪ್ರೈ. ಲಿಮಿಟೆಡ್ ಜಪ್ತಿ ಇಲ್ಲಿನ ವ್ಯವಸ್ಥಾಪಕ ನಿರ್ದೇಶಕರಾದ ಜಯಪ್ರಕಾಶ್ ಎ. ಶೆಟ್ಟಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿ, ವಿದ್ಯಾರ್ಥಿ ಜೀವನ ಅಮೂಲ್ಯವಾದುದು ಇಲ್ಲಿ ಸಿಗುವ ಅವಕಾಶವನ್ನು ಸರಿಯಾಗಿ ಸದ್ಬಳಕೆ ಮಾಡಿಕೊಂಡಾಗ ಮಾತ್ರ ಭವಿಷ್ಯದಲ್ಲಿ ಉತ್ತಮ ಬದುಕನ್ನು ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ದಿಗೆ ಇಂತಹ ವೇದಿಕೆ ಸಹಾಯಕವಾಗುವುದರ ಜೊತೆಗೆ ಭವಿಷ್ಯದ ಜವಬ್ದಾರಿಯುತ ನಾಗರಿಕರನ್ನು ರೂಪಿಸಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳಲ್ಲಿ ಶಿಸ್ತು, ಜವಬ್ದಾರಿ ಮತ್ತು ಸಹಕಾರ ಮನೋಭಾವ ಬೆಳೆಸಿಕೊಂಡಾಗ ಮಾತ್ರ ಉತ್ತಮ ನಾಯಕರಾಗಲು ಸಾಧ್ಯವಾಗುತ್ತದೆ ಎಂದರು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಮೆಟ್ರಿಕ್ ನಂತರದ ವಸತಿ ನಿಲಯದ ವಾರ್ಡನ್ ಭಾಸ್ಕರ ಪೂಜಾರಿ ಮಾತನಾಡಿ, ಇಂದಿನ ವಿದ್ಯಾರ್ಥಿಗಳೇ ನಾಳೆಯ ನಾಯಕರಾಗುವುದರಿಂದ ಇಂತಹ ಸಂಘಟನೆ ವಿದ್ಯಾರ್ಥಿಗಳ ಪ್ರತಿಭೆ, ಸಾಮರ್ಥ್ಯ ಮತ್ತು ಜವಬ್ದಾರಿಯನ್ನು ಬೆಳೆಸುವಲ್ಲಿ ಮಹತ್ವದ ಪಾತ್ರವಹಿಸುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ದಯಾನಂದ ಎನ್ ನಿರ್ವಹಿಸಿದರು. ವಿದ್ಯಾರ್ಥಿ ಪರಿಷತ್ತಿನ ಕಾರ್ಯದರ್ಶಿ ಶ್ರೀವಧನ ಕನ್ನಂತ ಸ್ವಾಗತಿಸಿದರು. ವಿದ್ಯಾರ್ಥಿನಿ ಶಿಫಾನ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ಪರಿಷತ್ತಿನ ನಿರ್ದೇಶಕರಾದ ಸೂರಜ್ ಕುಮಾರ್ ಶೆಟ್ಟಿ ಬಿ. ವಂದಿಸಿದರು.
















