ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಶಾಸಕ ಯಶ್‌ಪಾಲ್ ಎ ಸುವರ್ಣ ರವಿವಾರ ಅಜ್ಜರಕಾಡು ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕ್ರೀಡೆಗಳು ಕ್ರೀಡಾಪಟುಗಳ ಭವಿಷ್ಯಕ್ಕೆ ಭದ್ರ ಬುನಾದಿಯಾಗಬೇಕು. ಕ್ರೀಡಾಕೂಟಗಳು ಕ್ರೀಡಾಪಟುಗಳಿಗೆ ತಮ್ಮ ಪ್ರತಿಭೆ ಪ್ರದರ್ಶಿಸಲು ಉತ್ತಮ ವೇದಿಕೆಯಾಗಿದ್ದು, ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಿದರು.
ಕ್ರೀಡೆಯು ವಿದ್ಯಾರ್ಥಿಗಳಲ್ಲಿ ಶಿಸ್ತು, ಸಮಯಪ್ರಜ್ಞೆ, ಆತ್ಮವಿಶ್ವಾಸ ಹಾಗೂ ಸ್ಪರ್ಧಾತ್ಮಕ ಮನೋಭಾವ ಬೆಳೆಸುತ್ತದೆ. ಆರೋಗ್ಯಕರ ಜೀವನಶೈಲಿಗೂ ಕ್ರೀಡೆ ಸಹಕಾರಿಯಾಗಿದೆ. ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದ ಅವರು, ಕ್ರೀಡಾಕೂಟಗಳಲ್ಲಿ ಕ್ರೀಡಾಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಜಿಲ್ಲೆಗೆ ಕೀರ್ತಿ ತರಬೇಕೆಂದು ಶಾಸಕರು ಶುಭ ಹಾರೈಸಿದರು.
ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಎಂ.ಎ ಗಪೂರ್ ಮಾತನಾಡಿ, ಕ್ರೀಡೆಯಲ್ಲಿ ಸೋಲು- ಗೆಲುವಿಗಿಂತ ಮುಖ್ಯವಾಗಿ ಕ್ರೀಡಾಭಿಮಾನದಿಂದ ಪಾಲ್ಗೊಳ್ಳಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಕ್ರೀಡೆಯಲ್ಲಿ ಭಾಗವಹಿಸಿ ಆರೋಗ್ಯ ಸುಧಾರಣೆಗೂ ಮುಂದಾಗಬೇಕು ಎಂದರು.
ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ್ ಹೇರೂರು, ಕುಂದಾಪುರ ಹಾಗೂ ಕಾಪು ತಾಲೂಕು ಕ್ರೀಡಾಧಿಕಾರಿಗಳಾದ ಸತ್ಯನಾರಾಯಣ ಜಿ ಮತ್ತು ರವೀಂದ್ರ ನಾಯ್ಕ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿ, ಉಡುಪಿ ತಾಲೂಕು ಕ್ರೀಡಾಧಿಕಾರಿ ವಸಂತ ಜೋಗಿ ನಿರೂಪಿಸಿದರು.
















