ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಆಶ್ರಯದಲ್ಲಿ ಅನ್ನಪೂರ್ಣೇಶ್ವರಿ ಸೇವಾ ಬಂಧು ಟ್ರಸ್ಟ್ ಕುಂದಾಪುರ, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ ಇವರ ಸಹಯೋಗದೊಂದಿಗೆ ಉಚಿತ ನೇತ್ರ ತಪಾಸಣಾ ಶಿಬಿರ ಕಾರ್ಯಕ್ರಮವು ಕಾಲೇಜಿನಲ್ಲಿ ಜರುಗಿತು.
ಅನ್ನಪೂರ್ಣೇಶ್ವರಿ ಸೇವಾ ಬಂಧು ಟ್ರಸ್ಟ್, ಕುಂದಾಪುರ ಇದರ ಗೌರವಾಧ್ಯಕ್ಷರಾದ ಪ್ರಥಮ ದರ್ಜೆ ವಿದ್ಯುತ್ ಗುತ್ತಿಗೆದಾರರಾದ ಕೆ. ಆರ್. ನಾಯಕ್ ಕಾರ್ಯಕ್ರಮವನ್ನು ಉದ್ಘಾಟಿಸಿ, ಇಂದಿನ ಯುವ ಪೀಳಿಗೆಗೆ ಕಣ್ಣಿನ ಆರೋಗ್ಯ ಹಾಗೂ ಅದರ ಅರಿವು ಕಾಲೇಜು ದಿನಗಳಲ್ಲಿ ಅರ್ಥೈಸಿಕೊಳ್ಳಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪ್ರಸಾದ್ ನೇತ್ರಾಲಯ ಉಡುಪಿ ಇದರ ಸಾರ್ವಜನಿಕ ಸಂಪರ್ಕಾಧಿಕಾರಿಯಾದ ಗಣೇಶ್ ಕಣ್ಣಿನ ಜಾಗೃತಿಯ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅವರು ಮಾತನಾಡಿ, ಕಾಲೇಜು ವಿದ್ಯಾರ್ಥಿಗಳಲ್ಲಿ ಮೊಬೈಲ್ ದುರ್ಬಳಕೆ, ವಿದ್ಯಾರ್ಥಿಗಳ ಕಣ್ಣಿನ ಆರೋಗ್ಯಕ್ಕೆ ನೇರವಾಗಿ ಮಾರಕವಾಗುತ್ತದೆ ಎಂದು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ಅನ್ನಪೂರ್ಣೇಶ್ವರಿ ಸೇವಾಬಂಧು ಟ್ರಸ್ಟ್ ಇದರ ಅಧ್ಯಕ್ಷರಾದ ಸಾಯಿನಾಥ್ ಶೇಟ್, ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ ಹಾಗೂ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಸಂಯೋಜನಾಧಿಕಾರಿ ಯೋಗೀಶ್ ಶ್ಯಾನುಭೋಗ್ ಉಪಸ್ಥಿತರಿದ್ದರು.
ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಸಂಯೋಜಕರಾದ ಪ್ರಥ್ವಿಶ್ರೀ ಶೆಟ್ಟಿ ಸ್ವಾಗತಿಸಿ, ನಿರೂಪಿಸಿದರು.
















