ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಕರ್ನಾಟಕದ ನಾಡು-ನುಡಿ, ಸಂಸ್ಕೃತಿ ಬಿಂಬಿಸುವ ನಿಟ್ಟಿನಲ್ಲಿ ನವೆಂಬರ್ 1ರಂದು ಆಚರಿಸಲಾಗುವ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಅರ್ಥಪೂರ್ಣವಾಗಿ ಆಚರಿಸಲು ಅಗತ್ಯವಿರುವ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು.

ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಕನ್ನಡ ರಾಜ್ಯೋತ್ಸವ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 71ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ನವೆಂಬರ್ 1 ರಂದು ಉಡುಪಿ ನಗರದ ಅಜ್ಜರಕಾಡು ಮಹಾತ್ಮ ಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಬೆಳಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನಡೆಸಿ, ರಾಜ್ಯೋತ್ಸವದ ಸಂದೇಶ ನೀಡಲಿದ್ದಾರೆ ಎಂದರು.
ಕಾರ್ಯಕ್ರಮಕ್ಕೂ ಮುನ್ನ ನಗರದ ಬೋರ್ಡ್ ಹೈಸ್ಕೂಲ್ನ ಆವರಣದಲ್ಲಿ ಕನ್ನಡ ತಾಯಿ ಭುವನೇಶ್ವರಿಗೆ ಪೂಜೆ ಸಲ್ಲಿಸಿ, ನಂತರ ಅಜ್ಜರಕಾಡು ಕ್ರೀಡಾಂಗಣದವರೆಗೆ ಕನ್ನಡ ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರದ ಮೆರವಣಿಗೆ ನಡೆಯಲಿದ್ದು, ಕರ್ನಾಟಕ ಇತಿಹಾಸ, ಪರಂಪರೆ, ಸಂಸ್ಕೃತಿ ಮತ್ತು ಸಂಪ್ರದಾಯಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ವಿವಿಧ ಸಾಂಸ್ಕೃತಿಕ ಕಲಾತಂಡಗಳು ಹಾಗೂ ವಿವಿಧ ಇಲಾಖೆಯ ಯೋಜನೆಗಳನ್ನು ಸಾರುವ ಸ್ಥಬ್ಧಚಿತ್ರಗಳು ಮೆರವಣಿಗೆಯಲ್ಲಿ ಸಾಗಲಿವೆ ಎಂದರು.
ಸಮಾರಂಭದಲ್ಲಿ ಪೊಲೀಸ್, ಅಬಕಾರಿ, ಅರಣ್ಯ, ಗೃಹ ರಕ್ಷಕ, ಎನ್.ಎಸ್.ಎಸ್, ಎನ್.ಸಿ.ಸಿ. ಸ್ಕೌಟ್ ಮತ್ತು ಗೈಡ್ಸ್, ಸೇವಾದಳ ಹಾಗೂ ವಿವಿದ ಶಾಲಾ ವಿದ್ಯಾರ್ಥಿಗಳಿಂದ ಪಥಸಂಚಲನ ನಡೆಯಲಿದ್ದು, ಪಥ ಸಂಚಲನಕ್ಕೆ ಅಗತ್ಯವಿರುವ ಪೂರ್ವ ತಯಾರಿಗಳನ್ನು ಕಾರ್ಯಕ್ರಮ ನಡೆಯುವ ಮೂರು ದಿನದ ಮುಂಚಿತವಾಗಿ ಮಾಡಿಟ್ಟುಕೊಳ್ಳಬೇಕು ಎಂದ ಅವರು, ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾಥಿಗಳಿಂದ ಗುಂಪು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಇದಕ್ಕೂ ಸಹ ಪೂರ್ವಭಾವಿಯಾಗಿ ಸಿದ್ಧತೆ ಮಾಡಿಟ್ಟುಕೊಳ್ಳಬೇಕು ಎಂದರು.
ಕಾರ್ಯಕ್ರಮಕ್ಕೆ ಜನಪ್ರನಿಧಿಗಳು, ಗಣ್ಯರಿಗೆ ಶಿಷ್ಠಾಚಾರದಂತೆ ಆಹ್ವಾನ ಪತ್ರಿಕೆಯನ್ನು ಮುದ್ರಿಸಿ, ಆಹ್ವಾನಿಸಬೇಕು. ಅಧಿಕಾರಿಗಳು, ಸಿಬ್ಬಂದಿಗಳು, ಸಂಘ-ಸಂಸ್ಥೆಗಳು, ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದರೊಂದಿಗೆ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಬೇಕು ಎಂದರು.
ಕಾರ್ಯಕ್ರಮದ ಯಶಸ್ಸಿಗೆ ಸಭೆಯಲ್ಲಿ ವಿವಿಧ ಉಪ ಸಮಿತಿಗಳನ್ನು ರಚಿಸಲಾಗಿದ್ದು, ಸಮಿತಿಗೆ ನೀಡಿರುವ ಕಾರ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದ ಅವರು ಕಾರ್ಯಕ್ರಮದಲ್ಲಿ ವೇದಿಕೆ, ಆಸನ ವ್ಯವಸ್ಥೆ, ಕುಡಿಯುವ ನೀರಿನ ಸೌಲಭ್ಯ, ಪಥಸಂಚಲನದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಉಪಾಹಾರ ವ್ಯವಸ್ಥೆ, ಆಂಬುಲೆನ್ಸ್ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಸ್.ಎಸ್ ಕಾದ್ರೋಳ್ಳಿ, ನಗರಸಭೆ ಪೌರಾಯುಕ್ತ ಮಹಾಂತೇಶ್ ಹಂಗರಗಿ, ಜಿಲ್ಲಾಮಟ್ಟದ ವಿವಿಧ ಅನುಷ್ಠಾನಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

















