ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ,ಅ.25: ತಾಲೂಕಿನ ಅರಾಟೆ ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ಎರಡು ಖಾಸಗಿ ಬಸ್ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 26 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.
ಹೆಮ್ಮಾಡಿ ಅರಾಟೆ ಸೇತುವೆ ಬಳಿ ಭಾನುವಾರ ಬೆಳಗ್ಗೆ ಮಂಗಳೂರಿನತ್ತ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಕುಂದಾಪುರದಿಂದ ಸಾಗರದ ಕಡೆಗೆ ಸಂಚರಿಸುತ್ತಿದ್ದ ಖಾಸಗಿ ಬಸ್ಗಳ ಮುಖಮುಖಿ ಡಿಕ್ಕಿಯಾಗಿವೆ. ಅಫಘಾತದ ತೀವ್ರತೆಗೆ ಎರಡೂ ಬಸ್ಸಿನಲ್ಲಿದ್ದ ಪ್ರಯಾಣಿಕರು ಗಾಯಗೊಂಡಿದ್ದರು. ಒಟ್ಟು 26 ಪ್ರಯಾಣಿಕರಿಗೆ ಗಾಯಗಳಾಗಿದ್ದು, ಗಂಭೀರ ಗಾಯಗೊಂಡ ಮೂವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ಹಾಗೂ ಉಳಿದವರನ್ನು ಕುಂದಾಪುರದ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಗಂಗೊಳ್ಳಿಯ ಟೀಮ್ ಎಂ.ಎಚ್.ಐ ಆಪತ್ಥಾಂಧವ ಆಂಬುಲೆನ್ಸ್ ತಂಡದ ಇಬ್ರಾಹಿಂ ಗಂಗೊಳ್ಳಿ, ಅಬ್ರಾರ್ ಹಾಗೂ ಸ್ವಯಂಸೇವಕ ವಿಕಾಸ್ ಎರಡು ಆಂಬುಲೆನ್ಸ್ಗಳ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವ ಕಾರ್ಯದಲ್ಲಿ ತೊಡಗಿಸಿಕೊಂಡರು. ಸ್ಥಳೀಯ ರಿಕ್ಷಾ ಚಾಲಕರು ಹಾಗೂ ಸಾರ್ವಜನಿಕರು ಆಸ್ಪತ್ರೆಗೆ ಸಾಗಿಸುವಲ್ಲಿ ನೆರವಾದರು. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಸುಗಮ ಸಂಚಾರಕ್ಕೆ ಅನುವುಮಾಡಿಕೊಟ್ಟರು.












