ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಸಾಸ್ತಾನದಲ್ಲಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಸೋಮವಾರ ನಡೆದಿದೆ.
ಐರೋಡಿ ಗ್ರಾಮದ ಟೆಲಿಫೋನ್ ಎಕ್ಸ್‌ಚೇಂಜ್ ಕಟ್ಟಡ ನಿವಾಸಿ ಹೆನ್ರಿ ಫೆರ್ನಾಂಡಿಸ್ (73)ಮೃತರು. aವರು ಎಂದಿನಂತೆ ಬೆಳಿಗ್ಗೆ ಸಾಸ್ತಾನ ಸಂತ ಅಂತೋನಿ ಚರ್ಚ್‌ನಲ್ಲಿ ನಡೆಯುವ ಪೂಜೆಗೆಂದು ಮನೆಯಿಂದ ತೆರಳಿದ್ದರು. ಈ ವೇಳೆ ಬೆಳಿಗ್ಗೆ ಗುಂಡ್ಮಿ ಗ್ರಾಮದ ಸಾಸ್ತಾನ ಸರ್ಕಾರಿ ಆಸ್ಪತ್ರೆಯ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಅವರಿಗೆ ಬ್ರಹ್ಮಾವರದಿಂದ ಕುಂದಾಪುರ ಕಡೆಗೆ ಅತಿವೇಗ ಹಾಗೂ ಅಜಾಗರೂಕತೆಯಿಂದ ಚಲಿಸುತ್ತಿದ್ದ ಸ್ಕೂಟರ್ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಹೆನ್ರಿ ಫೆರ್ನಾಂಡಿಸ್ ರಸ್ತೆಗೆ ಬಿದ್ದು ತಲೆಗೆ ಗಂಭೀರ ಗಾಯವಾಗಿತ್ತು. ತಕ್ಷಣ ಅವರನ್ನು ಬ್ರಹ್ಮಾವರದ ಮಹೇಶ್ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಯ ಆದರ್ಶ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

















