ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿನ ಹೋಲಿ ಕ್ರಾಸ್ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ದೀಪಾವಳಿ ಹಬ್ಬವನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು.
ಬೆಳಕಿನ ಹಬ್ಬ ದೀಪಾವಳಿಯ ಮಹತ್ವವನ್ನು ಸಾರುವ ಉದ್ದೇಶದಿಂದ ಶಾಲೆಯಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. ದೀಪಾವಳಿ ಹಬ್ಬವು ಕತ್ತಲೆಯನ್ನು ದೂರಮಾಡಿ ಬೆಳಕನ್ನು ಹರಡುವುದರ ಜೊತೆಗೆ ಸತ್ಯ, ಪ್ರೀತಿ ಹಾಗೂ ಸೌಹಾರ್ದತೆಯ ಸಂದೇಶವನ್ನು ಸಾರುತ್ತದೆ. ಇಂತಹ ಹಬ್ಬಗಳ ಆಚರಣೆಯ ಮೂಲಕ ವಿದ್ಯಾರ್ಥಿಗಳಿಗೆ ನಮ್ಮ ಸಂಸ್ಕೃತಿ ಮತ್ತು ಸಂಪ್ರದಾಯಗಳ ಪರಿಚಯ ಮಾಡಿಕೊಡಲಾಯಿತು.
ಶಾಲೆಯ ವ್ಯವಸ್ಥಾಪಕರಾದ ರೆವರೆಂಡ್ ಸಿಸ್ಟರ್ ಆನ್ಸಿ ಪೌಲ್ ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ದೀಪಾವಳಿ ಹಬ್ಬದ ಶುಭಾಶಯಗಳನ್ನು ತಿಳಿಸಿದರು. ಶಾಲೆಯ ಮುಖ್ಯೋಪಾಧ್ಯಾಯರಾದ ಸಿಸ್ಟರ್ ಸಿಂತಿಯ ಉಪಸ್ಥಿತರಿದ್ದರು.
ಶಾಲಾ ಶಿಕ್ಷಕಿ ಅಕ್ಷತಾ ಕಾರ್ಯಕ್ರಮವನ್ನು ನಿರೂಪಿಸಿ, ಸ್ವಾಗತಿಸಿದರು. ಶಿಕ್ಷಕಿ ನಾಗರತ್ನ ವಂದಿಸಿದರು. ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಪಾಲ್ಗೊಳ್ಳುವಿಕೆಯಿಂದ ದೀಪಾವಳಿ ಆಚರಣೆ ಸಂಭ್ರಮದಿಂದ ನಡೆಯಿತು.

















