ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಕರಾವಳಿ ಕರ್ನಾಟಕದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಪ್ರಮುಖ ಧಾರ್ಮಿಕ ಕ್ಷೇತ್ರಗಳನ್ನು ಸಂಪರ್ಕಿಸುವ ದೇವಸ್ಥಾನ ಪ್ರವಾಸೋದ್ಯಮ ಕಾರಿಡಾರ್ ಅಭಿವೃದ್ಧಿ ಉದ್ದೇಶದ ಖಾಸಗಿ ವಿಧೇಯಕವನ್ನು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರು ವಿಧಾನಸಭೆಯಲ್ಲಿ ಮಂಡಿಸಲು ಮುಂದಾಗಿದ್ದು, ಈ ಕುರಿತು ವಿಧಾನಸೌಧದ ಮೊದಲ ಮಹಡಿಯ ಕೊಠಡಿ ಸಂಖ್ಯೆ 106ರಲ್ಲಿ ಕರ್ನಾಟಕ ವಿಧಾನಸಭೆಯ ಮಾನ್ಯ ಉಪಸಭಾಪತಿಗಳು ಹಾಗೂ ಖಾಸಗಿ ವಿಧೇಯಕ ಸಮಿತಿಯ ಅಧ್ಯಕ್ಷರಾದ ಮಂಕಾಳ್ ವೈದ್ಯ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ಸಭೆಯಲ್ಲಿ ಹಣಕಾಸು ಇಲಾಖೆ ಕಾರ್ಯದರ್ಶಿಗಳು, ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿಗಳು, ಮುಜರಾಯಿ ಇಲಾಖೆಯ ಆಯುಕ್ತರು, ಖಾಸಗಿ ವಿಧೇಯಕ ಸಮಿತಿಯ ಕಾರ್ಯದರ್ಶಿಗಳು ಹಾಗೂ ಸಮಿತಿಯ ಸದಸ್ಯರು ಮತ್ತು ವಿಧಾನಸಭಾ ಸದಸ್ಯರು ಉಪಸ್ಥಿತರಿದ್ದರು.
ಮುಂಬರುವ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಸದರಿ ಖಾಸಗಿ ವಿಧೇಯಕವನ್ನು ಮಂಡಿಸುವ ಕುರಿತು ಸಭೆಯಲ್ಲಿ ವಿವರವಾದ ಚರ್ಚೆ ನಡೆಯಿತು. ಈ ಹಿಂದೆ ಕರಾವಳಿ ಕರ್ನಾಟಕದ ಸಮಗ್ರ ಅಭಿವೃದ್ಧಿಗಾಗಿ ವಿಶೇಷ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಉದ್ದೇಶದಿಂದ ಶಾಸಕರು ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದ್ದರು. ಇದೀಗ ಕರಾವಳಿಯ ಧಾರ್ಮಿಕ ಪರಂಪರೆ ಮತ್ತು ಪ್ರವಾಸೋದ್ಯಮಕ್ಕೆ ಹೊಸ ಆಯಾಮ ನೀಡುವ ನಿಟ್ಟಿನಲ್ಲಿ ದೇವಸ್ಥಾನ ಪ್ರವಾಸೋದ್ಯಮ ಕಾರಿಡಾರ್ ಅಭಿವೃದ್ಧಿಗೆ ಖಾಸಗಿ ವಿಧೇಯಕವನ್ನು ಮಂಡಿಸಲು ಮುಂದಾಗಿದ್ದಾರೆ.
ಸಭೆಯಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ಸೇರಿದಂತೆ ಪ್ರಮುಖ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿ, ದೇವಸ್ಥಾನಗಳ ಮೂಲಸೌಕರ್ಯ ವೃದ್ಧಿ ಹಾಗೂ ಸಮಗ್ರ ಪ್ರವಾಸೋದ್ಯಮ ಪ್ರಾಧಿಕಾರದ ರಚನೆಗೆ ಸಂಬಂಧಿಸಿದ ವಿವಿಧ ವಿಚಾರಗಳ ಕುರಿತು ಚರ್ಚಿಸಲಾಯಿತು.
ಕರಾವಳಿ ಕರ್ನಾಟಕದ ಧಾರ್ಮಿಕ, ಸಾಂಸ್ಕೃತಿಕ ಮತ್ತು ಪ್ರವಾಸೋದ್ಯಮ ಸಾಮರ್ಥ್ಯವನ್ನು ಸಮಗ್ರವಾಗಿ ಬಳಸಿಕೊಂಡು ಸ್ಥಳೀಯ ಯುವಜನರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದು ಹಾಗೂ ಈ ಭಾಗದ ಅಭಿವೃದ್ಧಿಗೆ ಹೊಸ ವೇಗ ನೀಡುವುದು ಈ ವಿಧೇಯಕದ ಪ್ರಮುಖ ಆಶಯವಾಗಿದೆ ಎಂದು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ತಿಳಿಸಿದ್ದಾರೆ.

















