ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಕೊಲ್ಲೂರಿನ ಮೂಕಾಂಬಿಕಾ ದೇವಳದ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ನೆಟ್ಬಾಲ್ ಪಂದ್ಯಾಟದಲ್ಲಿ ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲೆಯ ಆರು ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ.
14 ವರ್ಷ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಪ್ರಮಿತಿ, ಶರಣ್ಯಾ, ಶ್ರೇಯಾ ಹಾಗೂ ತನ್ವಿ ಎಂ. ಮೊಗವೀರ ಮತ್ತು 17 ವರ್ಷ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಸಾನ್ವಿ ಹಾಗೂ ನಿರೀಕ್ಷಾ ರಾಜ್ಯಮಟ್ಟದ ನೆಟ್ಬಾಲ್ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಕ್ರೀಡಾ ಕ್ಷೇತ್ರದಲ್ಲಿ ತಮ್ಮ ಪ್ರತಿಭೆ, ಪರಿಶ್ರಮ ಹಾಗೂ ತಂಡದ ಒಗ್ಗಟ್ಟಿನ ಮೂಲಕ ಗಮನಾರ್ಹ ಸಾಧನೆಗೈದ ವಿದ್ಯಾರ್ಥಿಗಳ ಈ ಯಶಸ್ಸಿಗೆ ಶಾಲಾ ಆಡಳಿತ ಮಂಡಳಿ ಹರ್ಷ ವ್ಯಕ್ತಪಡಿಸಿದೆ.
ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾದ ಸಾಧಕ ವಿದ್ಯಾರ್ಥಿಗಳನ್ನು ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು, ಕಾರ್ಯದರ್ಶಿಗಳು, ಶಾಲೆಯ ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕರು, ಶಿಕ್ಷಕ ಮತ್ತು ಶಿಕ್ಷಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿ, ರಾಜ್ಯಮಟ್ಟದ ಸ್ಪರ್ಧೆಯಲ್ಲಿಯೂ ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದ್ದಾರೆ.

















