ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಗ್ರಾಮೀಣ ಜನರ ಆರೋಗ್ಯದ ಕಾಳಜಿಯಿಂದ ರೋಟರಿ ಕ್ಲಬ್ ತೆಕ್ಕಟ್ಟೆಯ ವತಿಯಿಂದ ಉಚಿತ ಚರ್ಮರೋಗ ತಪಾಸಣಾ ಶಿಬಿರವನ್ನು ಮಂಗಳವಾರ ಕುಂಭಾಶಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಯಶಸ್ವಿಯಾಗಿ ಆಯೋಜಿಸಲಾಯಿತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಉಡುಪಿ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ, ಕುಂಭಾಶಿ ಮತ್ತು ಇತರ ಸ್ವಯಂಸೇವಾ ಸಂಘಟನೆಗಳ ಸಹಯೋಗದೊಂದಿಗೆ ಈ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.
ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ರಾಘವೇಂದ್ರ ಹೆಬ್ಬಾರ್ ಪ್ರಾಸ್ತಾವಿಕವಾಗಿ ಮಾತನಾಡಿ, ಗ್ರಾಮೀಣ ಭಾಗದ ಜನರಿಗೆ ತಜ್ಞ ವೈದ್ಯಕೀಯ ಸೇವೆಗಳನ್ನು ಸ್ಥಳೀಯವಾಗಿಯೇ ಒದಗಿಸುವಲ್ಲಿ ಇಂತಹ ಶಿಬಿರಗಳ ಮಹತ್ವವನ್ನು ವಿವರಿಸಿದರು.
ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಚರ್ಮರೋಗ ತಜ್ಞರಾದ ಡಾ. ಸತೀಶ್ ಪೈ ಅವರು ದೀಪ ಬೆಳಗಿಸುವ ಮೂಲಕ ಶಿಬಿರವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಕುಷ್ಠರೋಗ ಸೇರಿದಂತೆ ವಿವಿಧ ಚರ್ಮರೋಗಗಳ ಲಕ್ಷಣಗಳು, ಮುನ್ನೆಚ್ಚರಿಕೆ ಕ್ರಮಗಳು ಹಾಗೂ ಚಿಕಿತ್ಸಾ ವಿಧಾನಗಳ ಕುರಿತು ಮಾಹಿತಿ ನೀಡಿದರು. ಚರ್ಮರೋಗಗಳನ್ನು ಆರಂಭಿಕ ಹಂತದಲ್ಲಿಯೇ ಗುರುತಿಸಿ ಸೂಕ್ತ ಚಿಕಿತ್ಸೆ ಪಡೆಯುವಂತೆ ಸಾರ್ವಜನಿಕರಿಗೆ ಸಲಹೆ ನೀಡಿದರು.
ರೋಟರಿ ಕ್ಲಬ್ ತೆಕ್ಕಟ್ಟೆಯ ಅಧ್ಯಕ್ಷ ರೊಟೇರಿಯನ್ ಟಿ. ರಾಜೀವ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಮುದಾಯದ ಆರೋಗ್ಯ ಸಂರಕ್ಷಣೆ ಮತ್ತು ಅಗತ್ಯವಿರುವವರಿಗೆ ಸೇವೆ ಒದಗಿಸುವುದು ರೋಟರಿಯ ಪ್ರಮುಖ ಧ್ಯೇಯವಾಗಿದೆ. ಇಂತಹ ಶಿಬಿರಗಳ ಸೌಲಭ್ಯಗಳನ್ನು ಸಾರ್ವಜನಿಕರು ಗರಿಷ್ಠ ಪ್ರಮಾಣದಲ್ಲಿ ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮವು ಆರೋಗ್ಯಾಧಿಕಾರಿ ಪದ್ಮ ಅವರ ಪ್ರಾರ್ಥನೆಯೊಂದಿಗೆ ಆರಂಭವಾಯಿತು. ರೋಟರಿ ವಲಯ 2ರ ಕಾರ್ಯದರ್ಶಿ ರೊಟೇರಿಯನ್ ಎಚ್. ಜಗದೀಶ್ ಸ್ವಾಗತಿಸಿದರು. ಆರೋಗ್ಯ ಇಲಾಖೆಯ ಅಧಿಕಾರಿ ಪೂಜಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಈ ಸಂದರ್ಭದಲ್ಲಿ ರೊಟೇರಿಯನ್ ವಿಠ್ಠಲ್ ರಾವ್, ರೊಟೇರಿಯನ್ ಸುಧೀರ್ ಮಲ್ಯಾಡಿ, ರೊಟೇರಿಯನ್ ಕೃಷ್ಣ ಮೊಗವೀರ, ರೊಟೇರಿಯನ್ ಸಂತೋಷ್ ದೇವಾಡಿಗ, ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗದವರು ಹಾಗೂ ಮಣಿಪಾಲದ ವೈದ್ಯಕೀಯ ಸಹಾಯಕರು ಉಪಸ್ಥಿತರಿದ್ದರು.
ಶಿಬಿರದಲ್ಲಿ ಸುಮಾರು 60 ಮಂದಿ ಫಲಾನುಭವಿಗಳು ಭಾಗವಹಿಸಿ ತಜ್ಞ ವೈದ್ಯರಿಂದ ತಪಾಸಣೆ ಹಾಗೂ ವೈದ್ಯಕೀಯ ಸಲಹೆ ಪಡೆದರು.
ಗ್ರಾಮೀಣ ಪ್ರದೇಶದ ಜನರಲ್ಲಿ ಚರ್ಮದ ಆರೋಗ್ಯದ ಕುರಿತು ಜಾಗೃತಿ ಮೂಡಿಸುವುದರ ಜೊತೆಗೆ, ತಜ್ಞ ವೈದ್ಯಕೀಯ ಸೇವೆಗಳನ್ನು ಜನರ ಮನೆಬಾಗಿಲಿಗೆ ತಲುಪಿಸುವಲ್ಲಿ ಈ ಶಿಬಿರವು ಯಶಸ್ವಿ ಹಾಗೂ ಅರ್ಥಪೂರ್ಣ ಸಮಾಜಮುಖಿ ಸೇವಾ ಕಾರ್ಯಕ್ರಮವಾಗಿ ಮೂಡಿಬಂದಿತು.

















