ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಕ್ರೀಡೆಗಳು ಕೇವಲ ಮನರಂಜನೆಗೆ ಸೀಮಿತವಾಗದೆ, ಶಿಸ್ತು, ಆತ್ಮವಿಶ್ವಾಸ, ಪರಸ್ಪರ ಸಹಕಾರ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಗ್ರಾಮೀಣ ಜನರಲ್ಲಿ ಇಂತಹ ಗುಣಗಳನ್ನು ಬೆಳೆಸುವ ನಿಟ್ಟಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕ್ರೀಡೋತ್ಸವ ಮಹತ್ವದ ವೇದಿಕೆಯಾಗಿದೆ. ಇಂತಹ ಕ್ರೀಡಾಕೂಟಗಳು ಗ್ರಾಮೀಣ ಜನರ ನಡುವೆ ಸೌಹಾರ್ದತೆ ಮತ್ತು ಒಗ್ಗಟ್ಟನ್ನು ಬಲಪಡಿಸುವುದರ ಜೊತೆಗೆ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಪೂರಕವಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೈಂದೂರು ತಾಲೂಕು ಯೋಜನಾಧಿಕಾರಿ ಸಂಜಯ ನಾಯ್ಕ್ ಹೇಳಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಬೈಂದೂರು ತ್ರಾಸಿ ವಲಯ ಇದರ ವತಿಯಿಂದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಭಾನುವಾರ ಜರಗಿದ ತ್ರಾಸಿ ವಲಯದ ಸ್ವಸಹಾಯ ಸಂಘಗಳ ಒಕ್ಕೂಟಗಳ ಕ್ರೀಡೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಸುಧಾಕರ ಆಚಾರ್ಯ ತ್ರಾಸಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷ ಯೋಗೀಶ ಆರ್ಕಾಟಿ, ಜನಜಾಗೃತಿ ವೇದಿಕೆ ಸದಸ್ಯ ವಾಸುದೇವ ಆಚಾರಿ, ಒಕ್ಕೂಟಗಳ ಅಧ್ಯಕ್ಷರು, ಪದಾಧಿಕಾರಿಗಳು, ಶೌರ್ಯ ವಿಪತ್ತು ನಿರ್ವಹಣೆ ಘಟಕದ ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.
ತ್ರಾಸಿ ವಲಯ ಮೇಲ್ವಿಚಾರಕ ಭರತ್ ಪಟಗಾರ್ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ಯೋಜನೆಯ ಸ್ವಸಹಾಯ ಸಂಘಗಳ ಸದಸ್ಯರು, ಮಹಿಳೆಯರು, ಪುರು?ರು ಹಾಗೂ ಯುವಕರು ಉತ್ಸಾಹದಿಂದ ಪಾಲ್ಗೊಂಡರು. ವಿವಿಧ ಕ್ರೀಡಾ ಸ್ಪರ್ಧೆಗಳು ಕ್ರೀಡೋತ್ಸವಕ್ಕೆ ವಿಶೇಷ ಮೆರುಗು ನೀಡಿದವು.














