ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಶಿರಿಯಾರ ಗ್ರಾಮ ಪಂಚಾಯತ್ನಲ್ಲಿ ನಡೆದ ಪ್ರಜಾ ಸೇವಾ ಆಂದೋಲನದ ಸಭೆ ಹಾಗೂ ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಅವರು ಉದ್ಘಾಟಿಸಿದರು.
ನಂತರ ಮಾತನಾಡಿ, ಪ್ರಜಾ ಸೇವಾ ಕಾರ್ಯಕ್ರಮ ಆರಂಭಗೊಂಡು ಎರಡು ತಿಂಗಳು ಕಳೆದರೂ, ಆಯಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಜನರ ಯಾವುದೇ ಸಮಸ್ಯೆಗಳು ಬಗೆಹರಿದಿಲ್ಲ ಎಂದು ಶಾಸಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಕಾರ್ಯಕ್ರಮ ಕೇವಲ ಘೋಷಣೆಗೆ ಸೀಮಿತವಾಗಬಾರದು. ಗ್ರಾಮ ಪಂಚಾಯತ್ ಮಟ್ಟದಲ್ಲಿ ಜನರು ಎದುರಿಸುತ್ತಿರುವ ಕುಡಿಯುವ ನೀರು, ರಸ್ತೆ, ವಿದ್ಯುತ್, ಪಡಿತರ, ಪಿಂಚಣಿ, ಆಸ್ತಿ ದಾಖಲೆ ಸೇರಿದಂತೆ ಮೂಲಭೂತ ಸಮಸ್ಯೆಗಳಿಗೆ ತಕ್ಷಣ ಪರಿಹಾರ ಸಿಗಬೇಕು. ಆದರೆ ಇದುವರೆಗೆ ಯಾವುದೇ ಗ್ರಾಮ ಪಂಚಾಯತ್ನಲ್ಲಿಯೂ ಗಮನಾರ್ಹ ಪ್ರಗತಿ ಕಂಡುಬಂದಿಲ್ಲ ಎಂದು ಹೇಳಿದರು.

ಜನರಿಗೆ ಸ್ಪಂದಿಸದಿದ್ದರೆ ಇಂತಹ ಕಾರ್ಯಕ್ರಮಗಳಿಗೆ ಅರ್ಥವಿಲ್ಲ. ಪ್ರತಿ ಗ್ರಾಮ ಪಂಚಾಯತ್ನಲ್ಲಿ ಬಗೆಹರಿದ ಸಮಸ್ಯೆಗಳ ಕುರಿತು ಸ್ಪಷ್ಟ ವರದಿ ನೀಡಬೇಕು ಎಂದು ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು.
ಕಾರ್ಯಕ್ರಮದ ವೇದಿಕೆಯಲ್ಲಿ ಬ್ರಹ್ಮಾವರ ತಹಶೀಲ್ದಾರ್ ಅಶೋಕ್ ಭಟ್, ಬ್ರಹ್ಮಾವರ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ವಿಜಯ, ಗ್ರಾಮ ಪಂಚಾಯತ್ ಪಿಡಿಒ ಜಯರಾಮ ಶೆಟ್ಟಿ, ಬ್ರಹ್ಮಾವರ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷೆ ಸುನಿತಾ ಶೆಟ್ಟಿ ಹಾಗೂ ಆಡಳಿತ ಅಧಿಕಾರಿ, ವಿವಿಧ ಇಲಾಖೆಯ ಅಧಿಕಾರಿಗಳು, ಶಿರಿಯಾರ ಗ್ರಾಮ ಪಂಚಾಯತ್ನ ಮಾಜಿ ಅಧ್ಯಕ್ಷರು ಹಾಗೂ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.














