ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ಗಂಗೊಳ್ಳಿ ಗ್ರಾಮ ಪಂಚಾಯತ್‌ಗೆ 15ನೇ ಮತ್ತು 16ನೇ ಹಣಕಾಸಿನ ಬಾಕಿ ಹಣವನ್ನು ತಕ್ಷಣವೇ ಬಿಡುಗಡೆ ಮಾಡಲು ಸರ್ಕಾರದ ಮಟ್ಟದಲ್ಲಿ ಕ್ರಮ ಕೈಗೊಳ್ಳಬೇಕು, ಅಲ್ಲಿಯವರೆಗೆ ಗ್ರಾಮಸ್ಥರ ಹಿತದೃಷ್ಟಿಯಿಂದ ಚರಂಡಿ ಸ್ವಚ್ಛತೆ, ಬೀದಿ ದೀಪ ನಿರ್ವಹಣೆ, ಎಸ್‌ಎಲ್‌ಆರ್‌ಎಂ ಸಿಬ್ಬಂದಿ ವೇತನ ಹಾಗೂ ಇಂಧನದ ನಿರ್ವಹಣೆಗೆ ಉಡುಪಿ ಜಿಲ್ಲಾ ಪಂಚಾಯತ್‌ನ ವಿಶೇಷ ತುರ್ತು ಪರಿಹಾರ ನಿಧಿಯಿಂದ ತಕ್ಷಣವೇ ಅನುದಾನ ಒದಗಿಸಬೇಕೆಂದು ಆಗ್ರಹಿಸಿ ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರ ನೇತೃತ್ವದಲ್ಲಿ ಗ್ರಾಪಂ ಸದಸ್ಯರು ಉಡುಪಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮತ್ತು ಕುಂದಾಪುರ ತಾಪಂ ಇಒ ಮಹೇಶ ಕೆ.ಜಿ. ಅವರನ್ನು ಅವರ ಕಚೇರಿಯಲ್ಲಿ ಸೋಮವಾರ ಭೇಟಿ ಮಾಡಿ ಮನವಿ ಸಲ್ಲಿಸಿದರು.
ಗಂಗೊಳ್ಳಿ ಗ್ರಾಮ ಪಂಚಾಯತ್‌ನಲ್ಲಿ ಆಡಳಿತ ಮಂಡಳಿ ಅಸ್ತಿತ್ವದಲ್ಲಿದರೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಸ್ಥಳೀಯ ಸಂಸ್ಥೆಗಳಿಗೆ ಬಿಡುಗಡೆಯಾಗಬೇಕಾದ 15ನೇ ಹಣಕಾಸಿನ ಬಾಕಿ ಹಣ ಹಾಗೂ 16ನೇ ಹಣಕಾಸಿನ ಹೊಸ ಅನುದಾನಗಳು ಕಳೆದ ಎರಡು ವ?ಗಳಿಂದ ಪಂಚಾಯತ್ ಗೆ ಬಿಡುಗಡೆಯಾಗಿಲ್ಲ. ಇದರಿಂದ ಪಂಚಾಯತ್ ತೀವ್ರ ಆರ್ಥಿಕ ಮುಗ್ಗಟ್ಟು ಅನುಭವಿಸುತ್ತಿದ್ದು ಇದರಿಂದ ಗ್ರಾಮಸ್ಥರಿಗೆ ಮೂಲಭೂತ ಸೌಕರ್ಯ ನೀಡಲು ಅಸಾಧ್ಯವಾಗಿದೆ. ಚರಂಡಿ ಸ್ವಚ್ಛತೆ, ಬೀದಿ ದೀಪ ಹಾಗೂ ರಸ್ತೆ ದುರಸ್ತಿ ಕಾಮಗಾರಿ ಸ್ಥಗಿತಗೊಂಡಿದೆ. ಅಭಿವೃದ್ಧಿ ಕಾಮಗಾರಿಗಳು ನಡೆಯದ ಕಾರಣ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಪಂಚಾಯತ್ ಸದಸ್ಯರು ಹೋದಲ್ಲಿ ಬಂದಲ್ಲಿ ಜನ ತೀವ್ರ ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ ಎಂದು ಮನವಿಯಲ್ಲಿ ತಿಳಿಸಿದೆ.
ಅನುದಾನದ ಕೊರತೆ ಮುಂದುವರೆದರೆ ಗಂಗೊಳ್ಳಿ ಗ್ರಾಮದ ವ್ಯವಸ್ಥೆ ಸಂಪೂರ್ಣವಾಗಿ ಹದಗೆಡುತ್ತದೆ ಆದ್ದರಿಂದ ಗಂಗೊಳ್ಳಿ ಗ್ರಾಮದ ವಿಶೇಷ ಹಾಗೂ ತುರ್ತು ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಬೇಕು ಗಂಗೊಳ್ಳಿ ಗ್ರಾಮ ಪಂಚಾಯತ್‌ಗೆ 15ನೇ ಮತ್ತು 16ನೇ ಹಣಕಾಸಿನ ಬಾಕಿ ಹಣವನ್ನು ತಕ್ಷಣವೇ ಬಿಡುಗಡೆ ಮಾಡಲು ಸರ್ಕಾರದ ಮಟ್ಟದಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮೂಲಕ ಕೋರಿದ್ದಾರೆ. ಅನುದಾನ ಬಿಡುಗಡೆ ಆಗದಿದ್ದಲ್ಲಿ ಗ್ರಾಮಸ್ಥರೊಂದಿಗೆ ಸೇರಿ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ.
ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಖಾರ್ವಿ, ಉಪಾಧ್ಯಕ್ಷ ತಬ್ರೇಜ್ ಹಾಗೂ ಗ್ರಾಮ ಪಂಚಾಯತ್ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.














