ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಪ್ರಾಥಮಿಕ ಶಾಲಾ ವಿಭಾಗದ 2026-27ನೇ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ಬುಧವಾರದಂದು ಅತ್ಯಂತ ಯಶಸ್ವಿಯಾಗಿ ನಡೆಸಲಾಯಿತು.
ಕಾರ್ಯಕ್ರಮಕ್ಕೆ ಶಾಲಾ ಪ್ರಾಂಶುಪಾಲರಾದ ಶರಣ ಕುಮಾರ ಅವರು ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಕ್ರೀಡಾ ಚಟುವಟಿಕೆಗಳು ಮಕ್ಕಳಲ್ಲಿ ಹೊಸ ಉತ್ಸಾಹ ಮತ್ತು ಚೈತನ್ಯವನ್ನು ತುಂಬಿದವು. ಪುಟಾಣಿ ಕ್ರೀಡಾಪಟುಗಳು ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಅತ್ಯಂತ ಉತ್ಸಾಹದಿಂದ ಪಾಲ್ಗೊಂಡು ತಮ್ಮ ಪ್ರತಿಭೆ, ಸಾಮರ್ಥ್ಯ ಹಾಗೂ ಕ್ರೀಡಾ ಮನೋಭಾವವನ್ನು ಅನಾವರಣಗೊಳಿಸಿದರು.
ಕಾರ್ಯಕ್ರಮದಲ್ಲಿ ಶಾಲಾ ಆಡಳಿತಾಧಿಕಾರಿಯವರಾದ ವೀಣಾರಶ್ಮಿ ಎಂ., ಉಪಪ್ರಾಂಶುಪಾಲರಾದ ರಾಮ ದೇವಾಡಿಗ, ಶೈಕ್ಷಣಿಕ ಸಲಹೆಗಾರರಾದ ಸುಜಾತಾ ಸದಾರಾಮ ಹಾಗೂ ಪ್ರಾಥಮಿಕ ಶಾಲಾ ವಿಭಾಗದ ಮುಖ್ಯೋಪಾಧ್ಯಾಯಿನಿಯವರಾದ ಹೇಮಾಮಾಲಿನಿ ಎಸ್. ಉಪಸ್ಥಿತರಿದ್ದು ಮಕ್ಕಳನ್ನು ಪ್ರೋತ್ಸಾಹಿಸಿದರು.
ಪ್ರೌಢಶಾಲಾ ವಿಭಾಗದ ದೈಹಿಕ ಶಿಕ್ಷಕರಾದ ಕೃಷ್ಣ ಹುಲ್ಲಾಲ್ ಹಾಗೂ ಕುಮಾರಿ ಲತಾ ಗೌಡ ಅವರು ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಅಚ್ಚುಕಟ್ಟಾಗಿ ಆಯೋಜಿಸಿ, ಮಕ್ಕಳಿಗೆ ಸೂಕ್ತ ಮಾರ್ಗದರ್ಶನ ನೀಡಿದರು. ಪ್ರಾಥಮಿಕ ಶಾಲಾ ವಿಭಾಗದ ಶಿಕ್ಷಕಿ ರೋಹಿಣಿ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ಈ ಕ್ರೀಡಾಕೂಟವು ಮಕ್ಕಳಲ್ಲಿ ಹೊಸ ಹುರುಪು ಹಾಗೂ ಉತ್ಸಾಹವನ್ನು ತುಂಬುವಲ್ಲಿ ಸಹಕಾರಿಯಾಯಿತು.














