ಕುಂದಾಪ್ರ ಡಾಟ್ ಕಾಂಸುದ್ದಿ.
ಕುಂದಾಪುರ: ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲದ ವತಿಯಿಂದ ಶಿರಿಯಾರ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆಯು ಸಾಯ್ಬರಕಟ್ಟೆ ಜಿ.ಎಸ್.ಬಿ. ಸಭಾಭವನದಲ್ಲಿ ಬುಧವಾರ ನಡೆಯಿತು.

ಸಭೆಯಲ್ಲಿ ಕುಂದಾಪುರ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ಚುನಾವಣೆಯಲ್ಲಿ ಗೆಲುವು ಸಾಧಿಸಲು ಕೇವಲ ವೇದಿಕೆಯ ಭಾಷಣಗಳು ಸಾಕಾಗುವುದಿಲ್ಲ. ಬದಲಾಗಿ, ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನೂ ಮನೆ ಮನೆಗೆ ತೆರಳಿ ನಡೆಸುವ ಸಂಘಟಿತ ಪ್ರಯತ್ನ ಹಾಗೂ ಜನರೊಂದಿಗೆ ಬೆಳೆಸಿಕೊಳ್ಳುವ ನಿಕಟ ಸಂಪರ್ಕವೇ ಗೆಲುವಿನ ಪ್ರಮುಖ ಶಕ್ತಿಯಾಗಿದೆ ಎಂದರು.
ಪ್ರತಿಯೊಬ್ಬ ಕಾರ್ಯಕರ್ತನು ತನ್ನ ಬೂತ್‌ನ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುವುದರೊಂದಿಗೆ, ಮತದಾರರ ಸಮಸ್ಯೆಗಳಿಗೆ ಸ್ಪಂದಿಸಿ ಪಕ್ಷದ ಮೇಲಿನ ವಿಶ್ವಾಸವನ್ನು ಬಲಪಡಿಸಬೇಕು. ಮುಂಬರುವ ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಗಳಲ್ಲಿ ಶಿರಿಯಾರದಿಂದಲೇ ಸಂಘಟನಾತ್ಮಕ ಗೆಲುವಿನ ಮುನ್ನುಡಿ ಬರೆಯುವ ನಿಟ್ಟಿನಲ್ಲಿ ಕಾರ್ಯಕರ್ತರು ಈಗಿನಿಂದಲೇ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಬಿಜೆಪಿ ಕುಂದಾಪುರ ಮಂಡಲ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಮಾತನಾಡಿ, ಪಕ್ಷದ ಸಂಘಟನೆಯಲ್ಲಿ ಹುದ್ದೆಗಿಂತ ಜವಾಬ್ದಾರಿ ಮತ್ತು ಬದ್ಧತೆ ಮುಖ್ಯ. ಕಾರ್ಯಕರ್ತರು ಪರಸ್ಪರ ಸಮನ್ವಯದೊಂದಿಗೆ ಶಿಸ್ತುಬದ್ಧವಾಗಿ ಕಾರ್ಯನಿರ್ವಹಿಸಿದಾಗ ಮಾತ್ರ ಸಂಘಟನೆ ಬಲಗೊಳ್ಳಲು ಹಾಗೂ ಚುನಾವಣೆಯಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದು ಹೇಳಿದರು.
ಸಭೆಯಲ್ಲಿ ಶಿರಿಯಾರ ಮಹಾಶಕ್ತಿ ಕೇಂದ್ರದ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳ ಆಯ್ಕೆ ಪ್ರಕ್ರಿಯೆ ಮತ್ತು ಮುಂಬರುವ ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಗಳ ಸಿದ್ಧತೆ ಕುರಿತು ಚರ್ಚೆ ನಡೆಸಲಾಯಿತು.
ವೇದಿಕೆಯಲ್ಲಿ ಬಿಜೆಪಿ ಮಂಡಲದ ನಿಕಟಪೂರ್ವ ಅಧ್ಯಕ್ಷ ಶಂಕರ್ ಅಂಕದಕಟ್ಟೆ, ಜಿಲ್ಲಾ ಉಪಾಧ್ಯಕ್ಷ ಸುರೇಶ್ ಶೆಟ್ಟಿ ಕಾಡೂರು, ಜಿಲ್ಲಾ ಕಾರ್ಯದರ್ಶಿ ಸದಾನಂದ ಬಳ್ಕೂರು, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಶಿರಿಯಾರ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಅಮರ್ ಶೆಟ್ಟಿ ಹಾಗೂ ಪ್ರಭಾರಿ ರಾಜೇಶ್ ಕಾವೇರಿ, ಮಹಾಶಕ್ತಿ ಕೇಂದ್ರದ ಪದಾಧಿಕಾರಿಗಳು, ವಿವಿಧ ಶಕ್ತಿ ಕೇಂದ್ರಗಳ ಪ್ರಮುಖರು, ಹಿರಿಯ ಮುಖಂಡರು ಹಾಗೂ ಬಿಜೆಪಿ ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸಿದ್ದರು.
ಮಂಡಲ ಪ್ರಧಾನ ಕಾರ್ಯದರ್ಶಿ ಸುಧೀರ್ ಕೆ.ಎಸ್. ಸ್ವಾಗತಿಸಿ, ಸತೀಶ್ ಪೂಜಾರಿ ವಕ್ವಾಡಿ ಕಾರ್ಯಕ್ರಮ ನಿರೂಪಿಸಿದರು.














