ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕನ್ನಡ ಸಾಹಿತ್ಯ ಪರಿಷತ್ ಕುಂದಾಪುರ ತಾಲೂಕು ಘಟಕದ ಅಧ್ಯಕ್ಷರಾಗಿ ಸಾಹಿತಿ, ಸಂಘಟಕ ಡಾ.ಸುಬ್ರಹ್ಮಣ್ಯ ಭಟ್ ಆಯ್ಕೆಯಾಗಿದ್ದಾರೆ.
ಜಿಲ್ಲಾ ಕಸಾಪ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗರ ಅಧ್ಯಕ್ಷತೆಯಲ್ಲಿ ಕುಂದಾಪುರದಲ್ಲಿ ನಡೆದ ಕಸಾಪ ಸದಸ್ಯರ ಸಮಾಲೋಚನಾ ಸಭೆಯಲ್ಲಿ ಈ ಆಯ್ಕೆ ನಡೆಯಿತು. ಬೈಂದೂರು ಹೋಬಳಿ ಕಸಾಪ ಘಟಕದ ನಿಕಟಪೂರ್ವ ಅಧ್ಯಕ್ಷರಾಗಿದ್ದ ಡಾ.ಸುಬ್ರಹ್ಮಣ್ಯ ಭಟ್ ಅವರು ವೃತ್ತಿಯಲ್ಲಿ ವೈದ್ಯರಾಗಿದ್ದು, ಬೈಂದೂರಿನ ಅಂಜಲಿ ಆಸ್ಪತ್ರೆಯ ಆಡಳಿತ ನಿರ್ದೇಶಕರಾಗಿದ್ದಾರೆ. ಕುಂದಾಪ್ರ ಡಾಟ್ ಕಾಂ ಸುದ್ದಿ.
ಕತೆ, ಕವನ, ಲೇಖನ ಮೊದಲಾದ ಪ್ರಕಾರಗಳಲ್ಲಿ ಸಾಹಿತ್ಯ ರಚನೆ ಮಾಡಿರುವ ಇವರ ಹಲವು ಪುಸ್ತಕಗಳು ಪ್ರಕಟಗೊಂಡಿವೆ. ಇವರು ಬರೆದ ಕತೆ ‘ವಿಷದ ಮಳೆ’ ತುಳುಭಾಷೆಯಲ್ಲಿ ಚಲನಚಿತ್ರವಾಗಿದ್ದು, 2005ರ ಸಾಲಿನ ಅತ್ಯುತ್ತಮ ಪ್ರಾದೇಶಿಕ ಭಾಷಾ ಚಲನಚಿತ್ರ ಪ್ರಶಸ್ತಿಗೆ ಭಾಜನವಾಗಿದೆ. ತಾಲೂಕು, ಜಿಲ್ಲಾ ಸಾಹಿತ್ಯ ಸಮ್ಮೇಳನಗಳ ಕವಿಗೋಷ್ಠಿಗಳಲ್ಲಿ ಕವನವಾಚನಗೈದಿರುವ ಇವರು ಹಲವು ಸಾಹಿತ್ಯ ಸಮ್ಮೇಳನಗಳನ್ನು ಸಂಘಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿರುತ್ತಾರೆ. ಉಡುಪಿ ಜಿಲ್ಲಾ ಆರ್ಟಿಐ ಕಾರ್ಯಕರ್ತರ ಒಕ್ಕೂಟದ ಜಿಲ್ಲಾಧ್ಯಕ್ಷರಾಗಿ, ಜನಸ್ಪಂದನ ವಾರಪತ್ರಿಕೆಯ ಸಂಪಾದಕರಾಗಿ, ಹಲವು ಸಂಘ ಸಂಸ್ಥೆಯನ್ನು ಹುಟ್ಟು ಹಾಕಿ ಸಾಮಾಜಿಕವಾಗಿ, ಸಾಹಿತ್ಯಿಕವಾಗಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.