ಕುಂದಾಪುರ: ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟದ ಉಡುಪಿ ಜಿಲ್ಲಾ ಉಪಾಧ್ಯಕ್ಷ ಮತ್ತು ಅಮಾಸೆಬೈಲು ಗ್ರಾಮ ಅಂಗವಿಕಲರ ಸಂಘದ ಅಧ್ಯಕ್ಷ- ಅಂಧ ಅಂಗವಿಕಲ ಗಣಪತಿ ಪೂಜಾರಿ ಎಂಬುವವರು ಮಾಹಿತಿ ಹಕ್ಕಿನ ಕಾಯಿದೆಯಡಿ ಅಂಗವಿಕಲರಿಗೆ ವಿವಿಧ ಸೌಲಭ್ಯ ಮತ್ತು ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಬಗ್ಗೆ ಮಾಹಿತಿ ಕೇಳಲು ಅಮಾಸೆಬೈಲು ಗ್ರಾಮ ಪಂಚಾಯತ್ ಕಛೇರಿಗೆ ತೆರಳಿದ್ದಾಗ ಗ್ರಾಮ ಪಂಚಾಯತ್ ಅಧ್ಯಕ್ಷೆ ಮತ್ತು ಇತರ ಇಬ್ಬರು ಗ್ರಾಮ ಪಂಚಾಯತ್ ಸದಸ್ಯರೊಂದಿಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಾಮಿಲಾಗಿ ಅವಾಚ್ಯ ಶಬ್ಧಗಳಿಂದ ನಿಂದಿಸಿ ಅವಮಾನಿಸಿ ತಳ್ಳಿ ಜೀವ ಬೆದರಿಕೆ ಹಾಕಿರುವ ಪ್ರಕರಣ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆದರೆ ಈವರೆಗೆ ಯಾವುದೇ ಕ್ರಮ ಜರುಗಿಸದಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟದ ಸದಸ್ಯರು ಏಪ್ರಿಲ್ 12ರಂದು ಕುಂದಾಪುರ ತಾಲೂಕು ಪಂಚಾಯತ್ ಕಛೇರಿ ಎದುರು ಅಂಗವಿಕಲರು ಭೃಹತ್ ಧರಣಿ ಸತ್ಯಾಗ್ರಹ ಹೋರಾಟ ಹಮ್ಮಿಕೊಂಡಿದ್ದಾರೆ ಎಂದು ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟದ ಉಡುಪಿ ಜಿಲ್ಲಾ ಗೌರವಾಧ್ಯಕ್ಷ ವೆಂಕಟೇಶ ಕೋಣಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.