ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಆಶ್ರಯದಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಅಂತರ್-ಕಾಲೇಜು ಆಹ್ವಾನಿತ ತಂಡಗಳ ಕಬಡ್ಡಿ ಪಂದ್ಯಾಕೂಟ ದಿವಂಗತ ಶ್ರೀಮತಿ ವಿಶಾಲಾಕ್ಷಿ ಬಿ. ಹೆಗ್ಡೆ ಸ್ಮಾರಕ ಬಿ.ಎಮ್.ಎಸ್. ಟ್ರೋಫಿ 2016ರಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತೆಂಕನಿಡಿಯೂರು ಪ್ರಥಮ ಸ್ಥಾನವನ್ನು ಪಡೆಯಿತು. ಮಂಗಳೂರು ವಿಶ್ವವಿದ್ಯಾನಿಲಯ ಕ್ಯಾಂಪಸ್ ತಂಡ ದ್ವಿತೀಯ ಸ್ಥಾನಕ್ಕೆ ತೃಪ್ತಿ ಪಡೆದುಕೊಂಡರೆ, ಶ್ರೀ ಶಾರದಾ ಕಾಲೇಜು ಬಸ್ರೂರು ತೃತೀಯ ಸ್ಥಾನ ಹಾಗೂ ಅತಿಥಯ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ತಂಡ ಚತುರ್ಥ ಸ್ಥಾನ ಪಡೆಯಿತು.
ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಬಿ.ಎಂ. ಸುಕುಮಾರ ಶೆಟ್ಟಿ ಅಧ್ಯಕ್ಷತೆ ವಹಿಸಿ ವಿಜೇತ ತಂಡಗಳಿಗೆ ಪ್ರಶಸ್ತಿಯನ್ನು ವಿತರಿಸಿದರು. ಮುಖ್ಯ ಅತಿಥಿಯಾಗಿ ಉಡುಪಿ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ವಿಭಾಗದ ಸಹಾಯಕ ನಿರ್ದೇಶಕರಾದ ಡಾ. ರೋಶನ್ ಕುಮಾರ್ ಶೆಟ್ಟಿ, ಕಾಲೇಜು ಆಡಳಿತ ಮಂಡಳಿಯ ಉಪಾಧ್ಯಕ್ಷರಾದ ಪ್ರೊ. ಎ.ಪಿ. ಮಿತ್ತಂತಾಯ, ಕಾರ್ಯದರ್ಶಿ ಸೀತರಾಮ ನಕ್ಕತ್ತಾಯ, ಕಾಲೇಜು ಗವರ್ನಿಂಗ್ ಕೌನ್ಸಿಲ್ ಸದಸ್ಯ ಅನಿಲ್ ಚಾತ್ರ, ಕಾಲೇಜು ಪ್ರಾಂಶುಪಾಲರಾದ ಪ್ರೊ. ದೋಮ ಚಂದ್ರಶೇಕರ್, ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕರಾದ ರಂಜಿತ್ ಟಿ.ಎನ್. ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಚೇತನ್ ಶೆಟ್ಟಿ ಕೋವಾಡಿ ಕಾರ್ಯಕ್ರಮ ನಿರೂಪಿಸಿದರು.