ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಉಡುಪಿ ಜಿಲ್ಲಾ ಅಂಧತ್ವ ನಿವಾರಣಾ ಸಂಘ ಉಡುಪಿ, ಪ್ರಾಥಮಿಕ ಆರೋಗ್ಯ ಕೇಂದ್ರ ಕಿರಿಮಂಜೇಶ್ವರ, ಚಾರ್ಮಕ್ಕಿ ನಾರಾಯಣ ಶೆಟ್ಟಿ ಲಯನ್ಸ್ ಕಣ್ಣಿನ ಆಸ್ಪತ್ರೆ ಕೋಟ ಹಾಗೂ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ಉಪ್ಪುಂದ ಇವರ ಜಂಟಿ ಆಶ್ರಯದಲ್ಲಿ ಉಚಿತ ಕಣ್ಣಿನ ಪೊರೆ ತಪಾಸಣೆ ಶಿಬಿರ ಶನಿವಾರ ನಾಗೂರಿನ ಒಡೆಯರ ಮಠ ಶ್ರೀ ಗೋಪಾಲಕೃಷ್ಣ ಕಲಾ ಮಂದಿರದಲ್ಲಿ ನಡೆಯಿತು.
ಜಿಲ್ಲಾ ಪಂಚಾಯತ್ ಸದಸ್ಯೆ ಗೌರಿ ದೇವಾಡಿಗ ಶಿಬಿರವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಕಣ್ಣಿನ ಬಗ್ಗೆ ಜನರಲ್ಲಿ ಮಾಹಿತಿ ಕೊರತೆ ಇದೆ. ಕಾಲಕಾಲಕ್ಕೆ ಕಣ್ಣಿನ ತಪಾಸಣೆ ಮಾಡಿಕೊಳ್ಳುವುದರ ಮೂಲಕ ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಲು ಮುಂದಾಗಬೇಕು ಎಂದರು. ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್.ಪ್ರಕಾಶ್ಚಂದ್ರ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕೋಟದ ಚಾರ್ಮಕ್ಕಿ ನಾರಾಯಣ ಶೆಟ್ಟಿ ಲಯನ್ಸ್ ಕಣ್ಣಿನ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ವೀಣಾ ಉಮೇಶ್, ತಾಲೂಕು ಪಂಚಾಯತ್ ಸದಸ್ಯರಾದ ಶ್ಯಾಮಲಾ ಕುಂದರ್, ಜಗದೀಶ ದೇವಾಡಿಗ, ಖಂಬದಕೋಣೆ ಗ್ರಾಮ ಪಂಚಾಯತ್ ಅಧ್ಯಕ್ಷ ರಾಜೇಶ ದೇವಾಡಿಗ, ಮೊದಲಾದವರು ಉಪಸ್ಥಿತರಿದ್ದರು.
ಕಿರಿಮಂಜೇಶ್ವರ ಪ್ರಾಥಮಿಕ ಆರೋಗ್ಯ ಕೇಂದ್ರದ ಫಾರ್ಮಸಿಸ್ಟ್ ಮಹಮ್ಮದ್ ಅಶ್ಫಾಕ್ ಸ್ವಾಗತಿಸಿದರು. ಕಿರಿಮಂಜೇಶ್ವರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಚಿಕ್ಮರಿ ಪ್ರಾಸ್ತಾವಿಕ ಮಾತುಗಳನ್ನಾಡಿ ಕಣ್ಣಿನ ರಕ್ಷಣೆ ಮತ್ತು ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಿದರು. ಕಾಲ್ತೋಡು ಸರಕಾರಿ ಆಯುಷ್ ಚಿಕಿತ್ಸಾಲಯದ ವೈದ್ಯಾಧಿಕಾರಿ ಡಾ.ವೀಣಾ ಕಾರಂತ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.