ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ : ಗ್ರಾಮ ಪಂಚಾಯತುಗಳು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೇಂದ್ರಿಕೃತ ಸ್ಥಾನವಾಗಬೇಕು. ಜನರ ಸಮಸ್ಯೆಗಳಿಗೆ ಸ್ಪಂದಿಸುವುದರ ಜೊತೆಗೆ ಜನರ ಕೆಲಸಗಳನ್ನು ಸೂಕ್ತ ಸಮಯದಲ್ಲಿ ಮಾಡಿಕೊಟ್ಟಾಗ ಜನರಿಗೆ ಪಂಚಾಯತ್ ಮೇಲೆ ನಂಬಿಕೆ, ವಿಶ್ವಾಸ ಮೂಡಲು ಸಾಧ್ಯವಾಗುತ್ತದೆ. ಗ್ರಾಮ ಪಂಚಾಯತ್ ಸದಸ್ಯರು ಪಕ್ಷಬೇಧ ಮರೆತು ಗ್ರಾಮದ ಸರ್ವಾಂಗೀಣ ಅಭಿವೃದ್ಧಿ ಬಗ್ಗೆ ಚಿಂತನೆ ನಡೆಸಬೇಕು ಎಂದು ಬೈಂದೂರು ಶಾಸಕ ಕೆ.ಗೋಪಾಲ ಪೂಜಾರಿ ಹೇಳಿದರು.
ಅವರು ಗಂಗೊಳ್ಳಿ ಗ್ರಾಮ ಪಂಚಾಯತ್‌ನ ನೂತನ ಕಾರ್ಯಾಲಯ ಕಟ್ಟಡ ಉದ್ಘಾಟಿಸಿ ಮಾತನಾಡಿದರು. ಪಂಚಾಯತ್‌ನಲ್ಲಿ ಮುಂದಿನ ಐದು ವರ್ಷದ ಯೋಜನೆ ರೂಪಿಸಬೇಕು. ಅಭಿವೃದ್ಧಿ ನೀಲಿನಕ್ಷೆಯನ್ನು ತಯಾರಿಸಿ ಜನಪ್ರತಿನಿಧಿಗಳ ಮೂಲಕ ಯೋಜನೆ ಕಾರ್ಯರೂಪಕ್ಕೆ ಬರಲು ಶ್ರಮಿಸಬೇಕು. ಅನುದಾನ ಹಂಚಿಕೊಳ್ಳುವ ಪದ್ಧತಿಯನ್ನು ತೆಗೆದುಹಾಕಿ, ಗ್ರಾಮದ ಅಭಿವೃದ್ಧಿಗೆ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಪ್ರಯತ್ನಿಸಬೇಕು ಎಂದರು.
ಜನಸಂಖ್ಯೆ ಕಡಿಮೆ ಇರುವ ಕಾರಣಕ್ಕೆ ಗಂಗೊಳ್ಳಿ ಗ್ರಾಮ ಪಂಚಾಯತ್ ಪಟ್ಟಣ ಪಂಚಾಯತ್ ಆಗಿ ಮೇಲ್ದರ್ಜೆಗೇರಿಸಲು ಸರಕಾರ ಸಮ್ಮತಿ ಸೂಚಿಸಿಲ್ಲ. ಗಂಗೊಳ್ಳಿಯ ಮ್ಯಾಂಗನೀಸ್ ರಸ್ತೆಯನ್ನು ೫೪ ಲಕ್ಷ, ಚರ್ಚ್ ರಸ್ತೆಯನ್ನು ಒಂದು ಕೋಟಿ ರೂ. ವೆಚ್ಚದಲ್ಲಿ ಮತ್ತು ವಿವಿಧ ರಸ್ತೆಗಳನ್ನು ಈಗಾಗಲೇ ಕಾಂಕ್ರೀಟಿಕರಣಗೊಳಿಸಲಾಗಿದೆ. ಇನ್ನು ಕೆಲವು ರಸ್ತೆಗಳ ಕಾಂಕ್ರೀಟಿಕರಣಕ್ಕೆ ಸುಮಾರು ೨ ಕೋಟಿ ರೂ. ಮೀಸಲಿರಿಸಲಾಗಿದೆ ಎಂದು ಹೇಳಿದ ಅವರು, ಗಂಗೊಳ್ಳಿ ಬಂದರಿನ ೧೦೨ ಕೋಟಿ ರೂ. ವೆಚ್ಚದ ಬ್ರೇಕ್ ವಾಟರ್ ಕಾಮಗಾರಿಗೆ ರಾಜ್ಯದ ಮುಖ್ಯಮಂತ್ರಿಗಳಿಂದ ಶಂಕುಸ್ಥಾಪನೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಅವರು ಹೇಳಿದರು.
ಮುಖ್ಯ ಅತಿಥಿಯಾಗಿದ್ದ ವಿಧಾನಪರಿಷತ್ ಸದಸ್ಯ, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಗ್ರಾಪಂ ಸದಸ್ಯರು ತಮ್ಮ ಜವಾಬ್ದಾರಿಗಳನ್ನು ಅರಿತು ಕೆಲಸ ನಿರ್ವಹಿಸಬೇಕು. ಸರಕಾರ ಗ್ರಾಪಂ.ಗಳಿಗೆ ಸಂವಿಧಾನಬದ್ಧ ಅಧಿಕಾರ ನೀಡಿದ್ದು, ಚುನಾಯಿತ ಸದಸ್ಯರು, ಗ್ರಾಮಸ್ಥರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಗ್ರಾಮದ ವಿವಿಧ ಸಮಸ್ಯೆಗಳನ್ನು ಅರಿತು ಅವುಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು ಎಂದರು.
ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರೇಷ್ಮಾ ಆರ್.ಖಾರ್ವಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಸದಸ್ಯೆ ಶೋಭಾ ಜಿ.ಪುತ್ರನ್, ತಾಪಂ ಸದಸ್ಯ ರಾಜು ದೇವಾಡಿಗ, ಕುಂದಾಪುರ ತಾಪಂ ಕಾರ್ಯನಿರ್ವಹಣಾಧಿಕಾರಿ ನಾರಾಯಣಸ್ವಾಮಿ, ಗಂಗೊಳ್ಳಿಯ ಉದ್ಯಮಿ ಎಚ್.ಗಣೇಶ ಕಾಮತ್, ಗಂಗೊಳ್ಳಿ ಚರ್ಚಿನ ಧರ್ಮಗುರು ರೆ.ಫಾ. ಅಲ್ಭರ್ಟ್ ಕ್ರಾಸ್ತಾ ಶುಭ ಹಾರೈಸಿದರು. ಮಾಜಿ ಮಂಡಲ ಪ್ರಧಾನ ಬಿ.ಸದಾನಂದ ಶೆಣೈ ಶುಭಾಶಂಸನೆಗೈದರು. ನಿವೃತ್ತ ಮುಖ್ಯೋಪಾಧ್ಯಾಯ ಶಬ್ಬೀರ್ ಸಾಹೇಬ್, ಭೂಸೇನಾ ನಿಗಮದ ಎಇ ಹೇಮಂತ್ ಮೊದಲಾದವರು ಉಪಸ್ಥಿತರಿದ್ದರು.
ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರವೀಣ ಡಿಸೋಜ ಸ್ವಾಗತಿಸಿದರು. ದಿನೇಶ ಶೇರುಗಾರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶೇಖರ್ ಜಿ. ಸಹಕರಿಸಿದರು. ಪತ್ರಕರ್ತ ಬಿ.ರಾಘವೇಂದ್ರ ಪೈ ಕಾರ್ಯಕ್ರಮ ನಿರೂಪಿಸಿದರು. ನಾರಾಯಣ ಶ್ಯಾನುಭಾಗ್ ವಂದಿಸಿದರು.