ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ : ಪೋಷಕರು ತಮ್ಮ ಮಕ್ಕಳನ್ನು ಹೆಚ್ಚಿನ ಹಣ ನೀಡಿ ಖಾಸಗಿ ಆಂಗ್ಲ ಮಾಧ್ಯಮ ಶಾಲೆಗಳಿಗೆ ಸೇರಿಸಿ ಅವರ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಮುತುವರ್ಜಿ ವಹಿಸುವಂತೆ, ಸರ್ಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ನಡೆಸುತ್ತಿರುವ ಮಕ್ಕಳ ಪೋಷಕರು ತಮ್ಮ ಮಕ್ಕಳ ವಿದ್ಯಾಭ್ಯಾಸದ ಕಡೆ ಹೆಚ್ಚಿನ ಗಮನಹರಿಸಬೇಕಿದೆ. ಸರ್ಕಾರಿ ಶಾಲೆಗಳಲ್ಲಿ ಕೂಡ ಆಂಗ್ಲ ಮಾಧ್ಯಮ ಶಿಕ್ಷಣ ನೀಡಲಾಗುತ್ತಿದ್ದು, ಖಾಸಗಿ ಶಾಲೆಗಳಿಗೆ ಕಡಿಮೆ ಇಲ್ಲದಂತೆ ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ನೀಡಲಾಗುತ್ತಿದೆ ಎಂದು ಬೈಂದೂರು ಶಾಸಕ ಕೆ.ಗೋಪಾಲ ಪೂಜಾರಿ ಹೇಳಿದರು.
ಅವರು ಗಂಗೊಳ್ಳಿಯ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಪ್ರಾಯೋಜಕತ್ವದಲ್ಲಿ ಜರಗಿದ ಶಾಲೆಯ ೧೨೧ನೇ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಕಡಿಮೆಯಾಗುತ್ತಿದ್ದು ಶಾಲೆಯ ಎಸ್‌ಡಿಎಂಸಿ, ಪೋಷಕರು ಸೇರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸಲು ಯೋಜನೆ ರೂಪಿಸಬೇಕು. ಮಕ್ಕಳ ಶಿಕ್ಷಣಕ್ಕೆ ಸರ್ಕಾರ ಎಲ್ಲಾ ರೀತಿಯ ಸಹಕಾರ ನೀಡುತ್ತಿದ್ದು, ಸರ್ಕಾರಿ ಶಾಲೆಗಳನ್ನು ಉಳಿಸಲು ಸ್ಥಳೀಯ ದಾನಿಗಳ, ಸಹಕಾರಿ ಸಂಸ್ಥೆಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಸಹಕಾರ ನೀಡಬೇಕು ಎಂದರು.
ಜಿಲ್ಲಾ ಪಂಚಾಯತ್ ಸದಸ್ಯೆ ಶೋಭಾ ಜಿ.ಪುತ್ರನ್, ತಾಲೂಕು ಪಂಚಾಯತ್ ಸದಸ್ಯ ಸುರೇಂದ್ರ ಖಾರ್ವಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉದ್ಯಮಿ ಮೌಲಾನಾ ಇಬ್ರಾಹಿಂ ಸಾಹೇಬ್, ಗಂಗೊಳ್ಳಿ ಮೊಹಿದ್ದೀನ್ ಜುಮ್ಮಾ ಮಸೀದಿಯ ಮೌಲಾನಾ ಅಬ್ದುಲ್ ವಹ್ಹಾಬ್ ಸಾಹೇಬ್ ಶುಭಾಶಂಸನೆಗೈದರು. ಇದೇ ಸಂದರ್ಭ ಶಾಲೆಯ ಅಭಿವೃದ್ಧಿಗೆ ಸಹಕರಿಸಿದ ಅಬ್ದುಲ್ ಹಾದಿ ರಶಾದಿ ಸಾಹೇಬ್, ಮುಹಮ್ಮದ್ ಅವೂಫ್ ಸಾಹೇಬ್, ನಾಕುದಾ ಮುತಹ್ಹೀರ್ ಸಾಹೇಬ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಗಂಗೊಳ್ಳಿ ಕ್ಲಸ್ಟರ್‌ನ ಸಿಆರ್‌ಪಿ ತಿಲೋತ್ತಮ ನಾಯಕ್, ಗಂಗೊಳ್ಳಿ ಅಂಜುಮಾನ್ ನೂರೂಲ್ ಇಸ್ಲಾಮ್ ಅಧ್ಯಕ್ಷ ಎಚ್.ಉಮರ್ ಬಾಷಾ ಸಾಹೇಬ್, ಗ್ರಾಮ ಪಂಚಾಯತ್ ಸದಸ್ಯ ಕೆ.ಯೂನೂಸ್ ಸಾಹೇಬ್, ಅರೆಹೊಳೆ ಅಹಮ್ಮದ್ ಅಲಿ ಸಾಹೇಬ್, ಮೌಲಾನಾ ಅಬ್ದುಲ್ ಹಮೀದ್, ಎಂ.ಎಚ್.ಯಾಸೀರ್, ಎಸ್‌ಡಿಎಂಸಿ ಅಧ್ಯಕ್ಷ ಮುಜಾಮೀಲ್, ಪಿ.ಎಂ.ಹುಸೈನಾರ್ ಮೊದಲಾದವರು ಉಪಸ್ಥಿತರಿದ್ದರು.
ಶಾಲೆಯ ಸಹಶಿಕ್ಷಕಿ ರೋಹಿಣಿ ಸ್ವಾಗತಿಸಿದರು. ಶಾಲೆಯ ಪ್ರಭಾರ ಮುಖ್ಯಶಿಕ್ಷಕಿ ಶಕಿಲಾ ತಬಸ್ಸುಮ್ ಶಾಲಾ ವರದಿ ವಾಚಿಸಿದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅಬ್ದುಲ್ ಹಮೀದ್ ಹಳೆ ವಿದ್ಯಾರ್ಥಿ ಸಂಘದ ವರದಿ ವಾಚಿಸಿದರು. ಪತ್ರಕರ್ತ ಮಹಮ್ಮದ್ ಇಬ್ರಾಹಿಂ ಎಂ.ಎಚ್. ಕಾರ್ಯಕ್ರಮ ನಿರೂಪಿಸಿದರು.