ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು: ಇಲ್ಲಿಗೆ ಸಮೀಪದ ಕೂಡೂರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ನಡೆದ ವಿದ್ಯಾರ್ಥಿ ಪೋಷಕರ ಸಭೆಯಲ್ಲಿ ಶಾಲೆಯ ವಿದ್ಯಾರ್ಥಿಗಳಿಗೆ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬ್ಯಾಗ್ ಹಾಗೂ ಕೊಡೆಗಳನ್ನು ವಿತರಿಸಲಾಯಿತು.
ಈ ಸಂದರ್ಭ ಅತಿಥಿಯಾಗಿ ಭಾಗವಹಿಸಿದ್ದ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷ ಗೋವಿಂದ ಬಾಬು ಪೂಜಾರಿ ಅವರು ಬ್ಯಾಗ್ ಹಾಗೂ ಕೊಡೆ ವಿತರಿಸಿ ಮಾತನಾಡಿ ಕೆಲವು ವರ್ಷಗಳ ಹಿಂದೆ ವಿದ್ಯಾರ್ಥಿಗಳು ಶಿಕ್ಷಣ ಪಡೆಯುವುದು ಮತ್ತು ಮೂಲಭೂತ ಸೌಕರ್ಯಗಳನ್ನು ಹೊಂದುವುದು ಒಂದು ಸವಾಲಾಗಿತ್ತು. ಆದರೆ ಇಂದು ಶಿಕ್ಷಣದ ಗುಣಮಟ್ಟ ಸುಧಾರಿಸಿದ್ದು ಅದಕ್ಕೆ ತಕ್ಕಂತೆ ವಿದ್ಯಾರ್ಥಿಗಳಿಗೆ ಅಗತ್ಯ ಸೌಕರ್ಯ ಒದಗಿಸಿಕೊಡುವುದು ಎಲ್ಲರ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಟ್ರಸ್ಟ್‌ನ ವತಿಯಿಂದ ಅರ್ಹ ಶಾಲೆಯ ವಿದ್ಯಾರ್ಥಿಗಳಿಗೆ ಪುಸ್ತಕ, ಬ್ಯಾಗ್, ಕೊಡೆಯನ್ನು ವಿತರಿಸಲಾಗುತ್ತಿದೆ. ಕಲಿಕೆಯಲ್ಲಿ ಉತ್ತಮವಿರುವ ವಿದ್ಯಾರ್ಥಿಗಳಿಗೂ ಪ್ರೋತ್ಸಾಹ ನೀಡಲಾಗುತ್ತಿದೆ ಎಂದರು.
ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ನಾಗರಾಜ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶ್ರೀ ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್‌ನ ಸದಸ್ಯ ನರಸಿಂಹ ಬಿ. ನಾಯಕ್, ನಿವೃತ್ತ ಮುಖ್ಯ ಶಿಕ್ಷಕ ಗೋಪಾಲ ಶೆಟ್ಟಿ ಜನ್ಮನೆ,ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೇಶ್ ಕಿಣಿ ಎಲ್ಲೂರು, ಉಪಾಧ್ಯಕ್ಷ ಮಂಜುನಾಥ ಶೆಟ್ಟಿ ಅತಿಥಿಗಳಾಗಿದ್ದರು.
ಶಾಲೆಯ ಮುಖ್ಯ ಶಿಕ್ಷಕ ಪಾಂಡುರಂಗ ಎಂ ಕಾರ್ಯಕ್ರಮ ನಿರೂಪಿಸಿದರು.