ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲಾ ಮಟ್ಟದ ಅಧಿಕಾರಿಗಳು ಕಚೇರಿಯಲ್ಲಿ ಕಾರ್ಯ ನಿರ್ವಹಿಸುವುದಕ್ಕಿಂತ ಹೆಚ್ಚಾಗಿ ಕ್ಷೇತ್ರಗಳಿಗೆ ತೆರಳಿ, ಜನರ ಸಮಸ್ಯೆ ಆಲಿಸಿ, ಜನಸ್ನೇಹಿಯಾಗಿ ಕಾರ್ಯ ನಿರ್ವಹಿಸಿ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದ್ದಾರೆ.
ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಎಲ್ಲಾ ಅಧಿಕಾರಿಗಳು ಕಚೇರಿಯಲ್ಲಿ ಕಾರ್ಯ ನಿರ್ವಹಿಸುವುದಕಿಂತ ಹೆಚ್ಚಾಗಿ ಕ್ಷೇತ್ರಗಳಿಗೆ ತೆರಳಿ ಸಮಸ್ಯೆಗಳನ್ನು ಅರಿಯಬೇಕು ಮತ್ತು ಕ್ಷೇತ್ರದಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ಪರಿಶೀಲಿಸಬೇಕು ಹಾಗೂ ತಮ್ಮ ಅಧೀನ ಕಚೇರಿಗಳಿಗೆ ಭೇಟಿ ನೀಡಿ ಅಲ್ಲಿನ ಕಾರ್ಯ ವೈಖರಿಯನ್ನು ಪರಿಶೀಲಿಸಬೇಕು , ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳು ಕಚೇರಿಗೆ ಸಮಯಕ್ಕೆ ಸರಿಯಗಿ ಆಗಮಿಸಿ, ತಮ್ಮ ಕೆಲಸ ಕಾರ್ಯಗಳನ್ನು ಮುಗಿಸುವಂತೆ ಹಾಗೂ ಕರ್ತವ್ಯದ ಅವಧಿಯಲ್ಲಿ ವೃಥಾ ಕಾಲ ಹರಣ ಮಾಡದೇ ನಿಗಧಿತ ಸಮಯದಲ್ಲಿ ಗುಣಮಟ್ಟದ ಕೆಲಸ ನಿರ್ವಹಿಸುವುದಕ್ಕೆ ಆದ್ಯತೆ ನೀಡಬೇಕು, ಎಲ್ಲಾ ಜಿಲ್ಲಾ ಕಚೇರಿಗಳಿಗೆ ಅನಿರೀಕ್ಷಿತ ಭೇಟಿ ನೀಡಿ ತಾನು ಪರಿಶೀಲಿಸುವುದಾಗಿ ಜಿಲ್ಲಾಧಿಕಾರಿ ತಿಳಿಸಿದರು.
ಕಚೇರಿಗೆ ಆಗಮಿಸುವ ಸಾರ್ವಜನಿಕರಿಗೆ ಸೂಕ್ತ ರೀತಿಯಲ್ಲಿ ಗೌರವಿಸಿ ಅವರ ಕೆಲಸ ಕಾರ್ಯಗಳನ್ನು ಮಾಡಿಕೊಡಬೇಕು, ಅನಾವಶ್ಯಕವಾಗಿ ಅವರನ್ನು ವಿವಿಧ ಕಚೇರಿಗಳಿಗೆ ಅಲೆದಾಡಿಸಬೇಡಿ, ನಿಮ್ಮ ಕಚೇರಿಯಲ್ಲಿ ಸಾರ್ವಜನಿಕರು ಕೋರುವ ಸೇವೆ ಇಲ್ಲವಾದಲ್ಲಿ , ಸಂಬಂದಪಟ್ಟ ಇಲಾಖೆಗೆ ತೆರಳಿ ಸದ್ರಿ ಸೌಲಭ್ಯ ಪಡೆಯುವ ಬಗ್ಗೆ ಅವರಿಗೆ ಮಾಹಿತಿ ನೀಡಿ, ಸಾರ್ವಜನಿಕರಿಂದ ದೂರುಗಳು ಬಾರದಂತೆ ಕರ್ತವ್ಯ ನಿರ್ವಹಿಸಿ ಎಂದು ಜಗದೀಶ್ ಹೇಳಿದರು.
ಎಲ್ಲಾ ಜಿಲ್ಲಾಮಟ್ಟದ ಅಧಿಕಾರಿಗಳು ತಮ್ಮ ಮೊಬೈಲ್‌ಗಳು ಸ್ವಿಚ್ ಆಫ್ ಆಗದ ಕುರಿತು ಎಚ್ಚರಿಕೆ ವಹಿಸಬೇಕು, ಕೂಡಲೇ ಕರೆ ಮಾಡಿದಲ್ಲಿ ಸಿಗುವಂತಿರಬೇಕು , ಕೇಂದ್ರಸ್ಥಾನದಲ್ಲಿ ಲಭ್ಯರಿದ್ದು, ಕೇಂಧ್ರ ಸ್ಥಾನದಿಂದ ಹೊರಹೋಗುವಾಗ ಅನುಮತಿ ಪಡೆದು ಹೋಗುವಂತೆ ತಿಳಿಸಿದ ಡಿಸಿ, ಪ್ರಸ್ತಾವನೆಗಳನ್ನು ಸಲ್ಲಿಸುವಾಗ ಸ್ಪಷ್ಠ ಅಭಿಪ್ರಾಯಗಳೊಂದಿಗೆ ಪೂರ್ಣ ದಾಖಲೆಗಳ ಸಮೇತ ಸಲ್ಲಿಸಿ, ಕಡತಗಳ ಶೀಘ್ರ ವಿಲೇವಾರಿಗೆ ಆದ್ಯತೆ ನೀಡುವಂತೆ ತಿಳಿಸಿದರು.
ಎಲ್ಲಾ ಇಲಾಖೆಗಳಲ್ಲಿ ಅಧಿಕಾರಿ ಮತ್ತು ಸಿಬ್ಬಂದಿಗಳು ಒಂದು ತಂಡವಾಗಿ ಕೆಲಸ ಮಾಡಿ, ಸಾರ್ವಜನಿಕರಿಗೆ ಅಗತ್ಯ ಸೇವೆಗಳನ್ನು ಒದಗಿಸುವಂತೆ ತಿಳಿಸಿದ ಜಿಲ್ಲಾಧಿಕಾರಿ, ಏನೇ ಸಮಸ್ಯೆಗಳಿದ್ದರೂ ನೇರವಾಗಿ ತಮ್ಮನ್ನು ಭೇಟಿಯಾಗಿ ಚರ್ಚಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ಎಸ್ಪಿ ನಿಶಾ ಜೇಮ್ಸ್, ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಹಾಗೂ ಎಲ್ಲಾ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.