ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ : ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯ. ಪರಿಸರ ನಾಶದಿಂದ ಮತ್ತು ಪರಿಸರ ಮಾಲಿನ್ಯದಿಂದ ಪ್ರಾಕೃತಿಕ ವಿಕೋಪ ಸಂಭವಿಸಿ ಸಾವುನೋವು ಮತ್ತು ಅಪಾರ ಆಸ್ತಿಪಾಸ್ತಿಗಳ ನಾಶಕ್ಕೆ ಕಾರಣವಾಗುತ್ತಿದೆ. ಪ್ಲಾಸ್ಟಿಕ್ ಬಳಕೆಯ ಹೆಚ್ಚಳದಿಂದ ಅನಾಹುತಗಳು ಹೆಚ್ಚುತ್ತಿದ್ದು, ಪರಿಸರ ಸಂರಕ್ಷಣೆ ಬಗ್ಗೆ ಜನರಲ್ಲಿ ಜಾಗೃತಿ, ಅರಿವು ಮೂಡಿಸುವ ಕೆಲಸ ನಡೆಯಬೇಕಿದೆ. ಸಮಾಜ ಸೇವಾ ಸಂಸ್ಥೆಗಳು, ಸಂಘ ಸಂಸ್ಥೆಗಳು ಇಂತಹ ಕಾರ್ಯಗಳಲ್ಲಿ ತೊಡಗಿಸಿಕೊಂಡು ಪರಿಸರವನ್ನು ರಕ್ಷಿಸಲು ಮುಂದಾಗಬೇಕು. ರಾಷ್ಟ್ರೀಯ ಸೇವಾ ಯೋಜನೆ ಈ ನಿಟ್ಟಿನಲ್ಲಿ ತೊಡಗಿಸಿಕೊಂಡು ಪರಿಸರ ಸಂಕರ‍್ಷಣೆಗೆ ಶ್ರಮಿಸುತ್ತಿರುವುದು ಶ್ಲಾಘನೀಯ ಎಂದು ತ್ರಾಸಿ ಗ್ರಾಮ ಪಂಚಾಯತ್ ಅಧ್ಯಕ್ಷ ಸುಧಾಕರ ಆಚಾರ್ಯ ಹೇಳಿದರು.
ಮಂಗಳೂರು ವಿಶ್ವವಿದ್ಯಾನಿಲಯ, ಕುಂದಾಪುರ ಎಜ್ಯುಕೇಶನ್ ಸೊಸೈಟಿ ಕುಂದಾಪುರ, ಡಾ.ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಕುಂದಾಪುರ ಮತ್ತು ತ್ರಾಸಿ ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ತ್ರಾಸಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಆಯೋಜಿಸಲಾಗಿದ್ದ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಒಂದು ದಿನದ ವಿಶೇಷ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಕುಂದಾಪುರ ಡಾ.ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಉಮೇಶ ಶೆಟ್ಟಿ ಕೊತ್ತಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ತ್ರಾಸಿ ಗ್ರಾಪಂ ಉಪಾಧ್ಯಕ್ಷೆ ಸುಧಾ ಖಾರ್ವಿ, ಗ್ರಾಪಂ ಸದಸ್ಯ ರವೀಂದ್ರ ಖಾರ್ವಿ, ವೆಂಕಟ ಪೂಜಾರಿ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶೋಭಾ, ಕಾರ್ಯದರ್ಶಿ ವಿನಯ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು. ಕಾಲೇಜಿನ ಸುಮಾರು ೧೨೫ ಎನ್ನೆಸ್ಸೆಸ್ ವಿದ್ಯಾರ್ಥಿಗಳು ತ್ರಾಸಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಡಲ ತೀರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸ್ವಚ್ಛತೆ ನಡೆಸಿದರು.
ಎನ್ನೆಸ್ಸೆಸ್ ಕೋ-ಆರ್ಡಿನೇಟರ್ ಸತೀಶ ಶೆಟ್ಟಿ ಸ್ವಾಗತಿಸಿದರು. ಕಾಲೇಜಿನ ಉಪಪ್ರಾಂಶುಪಾಲ ಚೇತನ್ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ರೇಷ್ಮಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.










