ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ರಕ್ತಕ್ಕೆ ಪರ‍್ಯಾಯವಾದ ವಸ್ತುವಿಲ್ಲ. ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲ. ರಕ್ತವನ್ನು ಮನುಷ್ಯರ ದಾನದಿಂದ ಮಾತ್ರ ಪಡೆಯಬಹುದು. ರಕ್ತದಾನ ಮಾಡುವುದು ಪ್ರತಿ ಆರೋಗ್ಯವಂತ ವ್ಯಕ್ತಿಯ ಕರ್ತವ್ಯವೆಂದು ಭಾವಿಸಿ ಆಗಾದ ರಕ್ತದಾನ ಮಾಡಿದಲ್ಲಿ ಮಾತ್ರ ರೋಗಗ್ರಸ್ಥರು ಮತ್ತು ಗಾಯಗೊಂಡವರನ್ನು ಬದುಕಿಸಲು ಸಾಧ್ಯ ಎಂದು ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ ಕುಂದಾಪುರ ಘಟಕದ ಚೇರ್‌ಮೆನ್ ಎಸ್.ಜಯಕರ ಶೆಟ್ಟಿ ಹೇಳಿದರು.
ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ನಿಯಮಿತ ಗಂಗೊಳ್ಳಿ, ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್ ಗಂಗೊಳ್ಳಿ ಮತ್ತು ರೋಟರಿ ಕ್ಲಬ್ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ ಕುಂದಾಪುರ ಘಟಕ, ರಕ್ತನಿಧಿ ಕೇಂದ್ರ ಕುಂದಾಪುರ ಇವರ ಸಹಯೋಗದೊಂದಿಗೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಜರಗಿದ ಸ್ವಯಂಪ್ರೇರಿತ ರಕ್ತದಾನ ಶಿಬಿರದಲ್ಲಿ ಅವರು ಮಾತನಾಡಿದರು.
ರಕ್ತದಾನ ಮಾಡುವುದರಿಂದ ದಾನಿಯ ದೇಹದಲ್ಲಿ ಹೊಸ ರಕ್ತ ಉತ್ಪತ್ತಿಯಾಗಲು ಪ್ರಚೋದನೆ ಆಗುತ್ತದೆ. ದೇಹದಲ್ಲಿ ಹೊಸ ರಕ್ತ ಚಾಲನೆಯಿಂದ ಕಾರ್ಯತತ್ಪರತೆ, ಜ್ಞಾಪಕ ಶಕ್ತಿ ವೃದ್ಧಿಯಾಗುತ್ತದೆ. ರಕ್ತದಾನ ಮಾಡಿದ ಕೆಲವೇ ಕ್ಷಣಗಳಲ್ಲಿ ದಾನಿಯ ದೇಹದಲ್ಲಿ ರಕ್ತದ ಉತ್ಪತ್ತಿ ಪ್ರಾರಂಭವಾಗಿ ದಾನ ಮಾಡಿದ ಪ್ರಮಾಣದ ರಕ್ತ ದೇಹದಲ್ಲಿ ಪುನರುತ್ಪತ್ತಿಯಾಗುತ್ತದೆ ಎಂದು ಅವರು ಹೇಳಿದರು.
ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ನಿಯಮಿತದ ಉಪಾಧ್ಯಕ್ಷ ಜಿ.ವಿಶ್ವನಾಥ ಆಚಾರ್ಯ ಶಿಬಿರವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಗಂಗೊಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕ ವಾಸಪ್ಪ ನಾಯ್ಕ್, ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿಯ ನಿರ್ದೇಶಕ ಜಿ.ವೆಂಕಟೇಶ ನಾಯಕ್, ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಶಿವಾನಂದ ಪೂಜಾರಿ ಶುಭ ಹಾರೈಸಿದರು. ಶ್ರೀ ರಾಘವೇಂದ್ರ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಜಿ.ಗಂಗಾಧರ ಪೈ, ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ ಕುಂದಾಪುರ ಘಟಕದ ಖಜಾಂಚಿ ಮುತ್ತಯ್ಯ ಶೆಟ್ಟಿ, ಗಣೇಶ ಆಚಾರ್ಯ, ಡಾ.ಎಚ್.ಎಸ್.ಮಲ್ಲಿ ಮತ್ತಿತರರು ಉಪಸ್ಥಿತರಿದ್ದರು.
ಗಂಗೊಳ್ಳಿ ರೋಟರಿ ಕ್ಲಬ್‌ನ ನಿಕಟಪೂರ್ವ ಅಧ್ಯಕ್ಷ ಕೆ.ರಾಮನಾಥ ನಾಯಕ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿಯ ಕಾರ್ಯನಿರ್ವಹಣಾಧಿಕಾರಿ ಗಣೇಶ ನಾಯಕ್ ವಂದಿಸಿದರು.