ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಒರಿಸ್ಸಾ ಮತ್ತು ಪಶ್ಚಿಮ ಬಂಗಾಳದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮಳೆ ಮುಂದುವರಿಯಲಿದ್ದು, ಕರಾವಳಿ ಜಿಲ್ಲೆಗಳಲ್ಲಿಯೂ ಮುಂದಿನ 5 ದಿನಗಳ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹಾಗಾಗಿ ಕರಾವಳಿ ಜಿಲ್ಲೆಗಳಿಗೆ ಮೂರು ದಿನ ರೆಡ್ ಅಲರ್ಟ್ ಹಾಗೂ ಎರಡು ದಿನ ಎಲ್ಲೆ ಅಲರ್ಟ್ ಘೋಷಿಸಲಾಗಿದೆ.
ಆಗಸ್ಟ್ 6, 9, 10 ವರೆಗೆ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ, ಆಗಸ್ಟ್ 7 ಮತ್ತು 8 ಕ್ಕೆ ಅರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಜಿಲ್ಲೆಯ ಮಳೆ ಹಾನಿ ಕುರಿತು ಮುಖ್ಯಮಂತ್ರಿಗಳಿOದ ವಿಚಾರಣೆ
ಉಡುಪಿ ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಸಂಭವಿಸಿರುವ ಹಾನಿ ಮತ್ತು ಪ್ತಸ್ತುತ ಸ್ಥಿತಿಗತಿಯ ಕುರಿತು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು , ಜಿಲ್ಲಾಧಿಕಾರಿ ಜಿ.ಜಗದೀಶ್ ಅವರೊಂದಿಗೆ ಬುಧವಾರ ಸಂಜೆ ದೂರವಾಣಿಯಲ್ಲಿ ಮಾಹಿತಿ ಪಡೆದರು.
ಉಡುಪಿ ಜಿಲ್ಲೆಯಲ್ಲಿ ಮಳೆಯಿಂದ ಸಂಭವಿಸಿರುವ ಮನೆ ಹಾನಿ, ಬೆಳೆ ಹಾನಿ, ಜಾನುವಾರು ಹಾನಿ, ಜೀವ ಹಾನಿಯ ಕುರಿತು ಜಿಲ್ಲಾಧಿಕಾರಿಗಳಿಂದ ವಿವರವಾದ ಮಾಹಿತಿ ಪಡೆದ ಮುಖ್ಯಮಂತ್ರಿಗಳು, ಮಳೆಯಿಂದ ಹಾನಿಗೊಳಗಾದವರಿಗೆ ಶೀಘ್ರದಲ್ಲಿ ಪರಿಹಾರ ವಿತರಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು. ಯಾವುದೇ ತುರ್ತು ನೆರವಿನ ಅಗತ್ಯವಿದ್ದಲ್ಲಿ ತಮ್ಮ ಗಮನಕ್ಕೆ ತರುವಂತೆ ಮುಖ್ಯಮಂತ್ರಿಗಳು ತಿಳಿಸಿದರು.
ಜಿಲ್ಲೆಯಲ್ಲಿನ ರಾಜ್ಯ ವಿಪತ್ತು ಪರಿಹಾರ ನಿಧಿಯಲ್ಲಿ ಸಾಕಷ್ಟು ಅನುದಾನವಿದ್ದು, ಮಳೆಯಿಂದ ಹಾನಿಯಾದವರಿಗೆ ಶೀಘ್ರದಲ್ಲಿ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಲಾಗುತ್ತಿದ್ದು, ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಅಗತ್ಯವಿರುವ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಸಹ ಕೈಗೊಳ್ಳಲಾಗಿದೆ , ಹಣಕಾಸಿನ ಕೊರತೆ ಇಲ್ಲ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಮುಖ್ಯಮಂತ್ರಿಯವರಿಗೆ ತಿಳಿಸಿದರು.
ಜಿಲ್ಲೆಯ ಮಳೆ ಪರಿಸ್ಥಿತಿ ಕುರಿತಂತೆ ರಾಜ್ಯದ ಕಂದಾಯ ಸಚಿವ ಅಶೋಕ್ ಅವರೂ ಸಹ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿದರು.