ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಕೇಂದ್ರ ಸರ್ಕಾರ ನಿಗಧಿಪಡಿಸಿರುವ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಜಿಲ್ಲೆಯಲ್ಲಿ ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ ಕೇಂದ್ರಗಳನ್ನು ತೆರೆಯುವ ಕುರಿತಂತೆ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಛೇರಿಯ ಸಭಾಂಗಣದಲ್ಲಿ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಉಡುಪಿ, ಕಾರ್ಕಳ ಮತ್ತು ಕುಂದಾಪುರದಲ್ಲಿ ಭತ್ತ ಖರೀದಿ ಕೇಂದ್ರಗಳನ್ನು ತೆರೆಯುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಸಾಮಾನ್ಯ ಭತ್ತವನ್ನು ಕ್ವಿಂಟಾಲ್ ಗೆ 1868 ರೂ ದರದಲ್ಲಿ ಮತ್ತು ಗ್ರೇಡ್ ಎ ಭತ್ತವನ್ನು ಕ್ವಿಂಟಾಲ್ ಗೆ1888ರೂ ದರದಲ್ಲಿ ಖರೀದಿಸುವಂತೆ ತಿಳಿಸಿದರು.
ಭತ್ತ ಖರೀದಿ ಕೇಂದ್ರಕ್ಕೆ ಅಗತ್ಯವಿರುವ ಎಲ್ಲಾ ಪೂರ್ವ ತಯಾರಿಗಳನ್ನು ಮಾಡಿಕೊಳ್ಳಬೇಕು ಎಂದ ಅವರು, ಭತ್ತ ಖರೀದಿಗೆ ಅಗತ್ಯವಿರುವ ಮೊತ್ತವನ್ನು ಕೃಷಿ ಮಾರಾಟ ಇಲಾಖೆಯ ಆವರ್ತ ನಿಧಿಯಿಂದ ಭರಿಸಲು ಸೂಚಿಸಲಾಯಿತು.
ಕೃಷಿ ಇಲಾಖೆ ವತಿಯಿಂದ ಭತ್ತ ಖರೀದಿ ಕೇಂದ್ರಕ್ಕೆ ಗ್ರೇಡರ್ ಸಿಬ್ಬಂದಿಯನ್ನು ನಿಯೋಜಿಸಲು ಮತ್ತು ಭತ್ತದ ತೇವಾಂಶ ಪರಿಶೀಲಿಸಲು ಮಾಯಿಶ್ಚರ್ ಮೀಟರ್ ಒದಗಿಸಲು ಕೃಷಿ ಇಲಾಖೆಗೆ ಜಿಲ್ಲಾಧಿಕಾರಿ ಸೂಚಿಸಿದರು.
ಸಭೆಯಲ್ಲಿ ಎಪಿಎಂಸಿ ಮತ್ತು ಕೃಷಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.