ಬೈಂದೂರು: ಕಳೆದ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ 16ನೇ ಸ್ಥಾನದಲ್ಲಿದ್ದ ಉಡುಪಿ ಜಿಲ್ಲೆ, ಈ ಬಾರಿ ಪ್ರಥಮ ಸ್ಥಾನ ಪಡೆಯುವುದಕ್ಕೆ ಇಲ್ಲಿನ ಶಿಕ್ಷಕರ ಕಠಿಣ ದುಡಿಮೆಯೇ ಕಾರಣ ಎಂದು ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಮಾರ ಸೊರಕೆ ಹೇಳಿದರು.
ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಸುಮಾರು 30 ಲಕ್ಷ ರೂ. ವೆಚ್ಚದ ಹೆಚ್ಚುವರಿ ತರಗತಿ ಕೊಠಡಿ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಬಳಿಕ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಶಾಸಕ ಗೋಪಾಲ ಪೂಜಾರಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಈ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಶೌಚಾಲಯ ನಿರ್ಮಾಣಕ್ಕಾಗಿ ಈ ಹಿಂದೆ ಇಲ್ಲಿಗೆ ಭೇಟಿ ನೀಡಿದ ಶಿಕ್ಷಣ ಸಚಿವರು ಅನುದಾನ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ದರು, ಅದರಂತೆ ಈಗಾಗಲೇ ೫ ಲಕ್ಷ ರೂ. ಬಿಡುಗಡೆಗೊಳಿಸಿದ್ದಾರೆ, ಮುಂದಿನ ದಿನಗಳಲ್ಲಿ ಕಾಲೇಜಿಗೆ ಮೂಲ ಸೌಕರ್ಯ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.
ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷೆ ಗೌರಿ ದೇವಾಡಿಗ, ತಾ.ಪಂ. ಅಧ್ಯಕ್ಷ ಭಾಸ್ಕರ ಬಿಲ್ಲವ, ತಾ.ಪಂ. ಸದಸ್ಯ ರಾಜು ಪೂಜಾರಿ ಗ್ರಾ.ಪಂ. ಉಪಾಧ್ಯಕ್ಷೆ ಕಲಾವತಿ ನಾಗರಾಜ, ಪ್ರಿನ್ಸಿಪಾಲ್ ಟಿ. ಪಾಲಾಕ್ಷ, ವೈಸ್ ಪ್ರಿನ್ಸಿಪಾಲ್ ಜ್ಯೋತಿ ಬೈಂದೂರು-ಉಪ್ಪುಂದ ಲಯನ್ಸ್ ಕ್ಲಬ್ ಅಧ್ಯಕ್ಷ ಜಿ. ಗೋಕುಲ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಶಿಕ್ಷಕ ರವೀಂದ್ರ ಪಿ. ಕಾರ್ಯಕ್ರಮ ನಿರೂಪಿಸಿದರು.