ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ನೆಟ್‌ಫಿಶ್ – ಎಂಪಿಡಾ, ಮೀನುಗಾರಿಕಾ ಇಲಾಖೆ, ಕರಾವಳಿ ಕಾವಲು ಪೊಲೀಸ್ ಠಾಣೆ ಗಂಗೊಳ್ಳಿ ಮತ್ತು ಗಂಗೊಳ್ಳಿಯ ವಿವಿಧ ಮೀನುಗಾರಿಕಾ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಗಂಗೊಳ್ಳಿ ಮೀನುಗಾರಿಕಾ ಬಂದರು ಪ್ರದೇಶದಲ್ಲಿ ಬಂದರು ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಬೈಂದೂರು ಶಾಸಕ ಬಿ. ಎಂ. ಸುಕುಮಾರ್ ಶೆಟ್ಟಿ ಮೀನುಗಾರಿಕೆಯನ್ನು ಅಭಿವೃದ್ಧಿಪಡಿಸುವ ದೃಷ್ಟಿಯಿಂದ ಮೀನುಗಾರಿಕಾ ಬಂದರುಗಳ ಅಭಿವೃದ್ಧಿ ಹಾಗೂ ಮೀನುಗಾರರಿಗೆ ವಿವಿಧ ಸೌಲಭ್ಯಗಳನ್ನು ಸರಕಾರ ನೀಡುತ್ತಿದೆ. ಗಂಗೊಳ್ಳಿ ಮೀನುಗಾರಿಕಾ ಬಂದರಿನ ಜೆಟ್ಟಿ ಪುನರ್ ನಿರ್ಮಾಣಕ್ಕೆ12 ಕೋಟಿ ರೂ. ಮಂಜೂರಾಗಿದ್ದು, ಆದಷ್ಟು ಶೀಘ್ರ ಕಾಮಗಾರಿ ಆರಂಭವಾಗಲಿದೆ. ಬ್ರೇಕ್ ವಾಟರ್ ಕಾಮಗಾರಿಯಲ್ಲಿ ಉಳಿದ1.35 ಕೋಟಿ ರೂ.ಗಳನ್ನು ಹರಾಜು ಪ್ರಾಂಗಣ ನಿರ್ಮಾಣಕ್ಕೆ ಬಳಸಿಕೊಳ್ಳಲಾಗುತ್ತಿದೆ. ಬಂದರು ಪ್ರದೇಶದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವುದರ ಜೊತೆಗೆ ನಮ್ಮ ಹೃದಯವನ್ನು ಕೂಡ ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದು ಹೇಳಿದರು.
ಗಂಗೊಳ್ಳಿ ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕಿ ಅಂಜನಾದೇವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯತ್ ಸದಸ್ಯೆ ಶೋಭಾ ಜಿ. ಪುತ್ರನ್, ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ಗಂಗೊಳ್ಳಿ ಕರಾವಳಿ ಕಾವಲು ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ನಂಜಪ್ಪ, ಗಂಗೊಳ್ಳಿ ಪ್ರಾಥಮಿಕ ಮೀನುಗಾರ ಸಹಕಾರಿ ಸಂಘದ ಅಧ್ಯಕ್ಷ ಸದಾಶಿವ ಖಾರ್ವಿ, ಹಸಿಮೀನು ವ್ಯಾಪಾರಸ್ಥರ ಸಂಘದ ಅಧ್ಯಕ್ಷ ವಾಸುದೇವ ಶಿಪಾ, ಕೊಂಕಣಿ ಖಾರ್ವಿ ಮಾರ್ಕೇಟಿಂಗ್ ಸಮಿತಿ ಅಧ್ಯಕ್ಷ ಸೌಪರ್ಣಿಕ ಬಸವ ಖಾರ್ವಿ, ಮೀನುಗಾರ ಮುಖಂಡರಾದ ನಾರಾಯಣ, ರಮೇಶ ಕುಂದರ್, ಮೀನುಗಾರಿಕಾ ಇಲಾಖೆಯ ಗೋಪಾಲಕೃಷ್ಣ, ಶ್ರುತಿ, ಪ್ರತೀಕ್ಷಾ, ಸರಸ್ವತಿ, ಮತ್ತಿತರರು ಉಪಸ್ಥಿತರಿದ್ದರು.
ಸತೀಶ ಮೆಹಬನ್ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಎಂಪಿಡಾ ರಾಜ್ಯ ಸಂಯೋಜಕ ನಾರಾಯಣ ಕೆ. ಎ. ಪ್ರಾಸ್ತಾವಿಕ ಮಾತುಗಳನ್ನಾಡಿ ವಂದಿಸಿದರು.