ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಸರ್ಕಾರಿ ಹಾಗೂ ಖಾಸಗಿ ಆರೋಗ್ಯ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ 17,641 ಮಂದಿಗೆ ಪ್ರಥಮ ಹಂತದಲ್ಲಿ ಕೋವಿಡ್–19 ಲಸಿಕೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಲಸಿಕಾ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, 2021ರ ಮೊದಲ ತ್ರೈಮಾಸಿಕ ಅವಧಿಯಲ್ಲಿ ಕೋವಿಡ್ ಲಸಿಕೆ ಸರಬರಾಜು ನಿರೀಕ್ಷೆಯಿದ್ದು, ಲಸಿಕೆಯನ್ನು ಪ್ರಾಥಮಿಕವಾಗಿ ಕೊರೊನಾ ವಿರುದ್ದ ಹೋರಾಡುತ್ತಿರುವ ಆರೋಗ್ಯ ಕ್ಷೇತ್ರದ ಸಿಬ್ಬಂದಿಗೆ ನೀಡಲಾಗುವುದು ಎಂದರು.
ಗುರುತಿಸಲಾಗಿರುವ ಪ್ರತಿಯೊಬ್ಬರಿಗೂ 2 ಡೋಸ್ ಲಸಿಕೆ ನೀಡಲು ನಿರ್ಧರಿಸಲಾಗಿದ್ದು, ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಯ ಸಿಬ್ಬಂದಿಗೆ ತರಬೇತಿ ನೀಡಲಾಗಿದೆ. ಲಸಿಕೆ ಸಂಗ್ರಹ ಕೊಠಡಿ ಸಿದ್ಧಪಡಿಸಲಾಗಿದ್ದು, ಲಸಿಕೆ ಸಾಗಾಟಕ್ಕೆ 1,324 ವಾಹನಗಳನ್ನು ಗುರುತಿಸಲಾಗಿದೆ. 100 ಮಂದಿಗೆ ಒಂದು ಸ್ಥಳದಲ್ಲಿ ಲಸಿಕೆ ಹಾಕಲಾಗುವುದು. 342 ಸರ್ಕಾರಿ ಹಾಗೂ 18 ಖಾಸಗಿ ಸ್ಥಳಗಳನ್ನು ಗುರುತಿಸಲಾಗಿದ್ದು, ಪ್ರತಿ ಲಸಿಕಾ ಕೇಂದ್ರದಲ್ಲಿ 5 ಮಂದಿ ಕರ್ತವ್ಯ ನಿರ್ವಹಿಸಲಿದ್ದಾರೆ.
ಲಸಿಕೆ ಪಡೆಯುಲು ಬರವವರಿಗೆ ನಿರೀಕ್ಷಣಾ ಕೊಠಡಿ, ಲಸಿಕೆ ನೀಡುವ ಕೊಠಡಿ ಮತ್ತು ವೀಕ್ಷಣಾ ಕೊಠಡಿಗಳ ವ್ಯವಸ್ಥೆ ಮಾಡಲಾಗಿದೆ. ಗುರುತಿಸಲಾಗಿರುವ ಸರ್ಕಾರಿ ಮತ್ತು ಖಾಸಗಿ ಆರೋಗ್ಯ ಕ್ಷೇತ್ರದ ಸಿಬ್ಬಂದಿಗೆ ಲಸಿಕೆ ನೀಡುವ ಸ್ಥಳ, ಸಮಯದ ಕುರಿತು ಸಂದೇಶ ರವಾನಿಸಲಾಗುವುದು. ಎರಡು ಹಂತದಲ್ಲಿ ಲಸಿಕೆ ಹಾಕಿದ ಬಳಿಕ, ಅವರಿಗೆ ಲಸಿಕೆ ಪಡೆದ ಕುರಿತು ಪ್ರಮಾಣಪತ್ರ ವಿತರಿಸಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು.
ಸಂಪೂರ್ಣ ಕೋವಿಡ್ ಸುರಕ್ಷತಾ ಕ್ರಮಗಳನ್ನು ಅನುಸರಿಸಲಾಗುವುದು. ಲಸಿಕೆ ಹಾಕಿದ ಬಳಿಕ ಸಿರೆಂಜ್ ಹಾಗೂ ಇತ್ಯಾದಿ ತ್ಯಾಜ್ಯವನ್ನು ಸುರಕ್ಷಿತವಾಗಿ ವಿಲೇವಾರಿ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಲಸಿಕೆ ಕೊಠಡಿಗಳಲ್ಲಿ ಅಗತ್ಯ ಮೂಲಸೌಲಭ್ಯ ಕಲ್ಪಿಸಲು ನೋಡೆಲ್ ಅಧಿಕಾರಿಯನ್ನು ನಿಯೋಜಿಸಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಕೋವಿಡ್ ಲಸಿಕೆ ಕುರಿತು ಜಿಲ್ಲಾ ಮಟ್ಟದಲ್ಲಿ ತರಬೇತಿ ನೀಡಲಾಗಿದ್ದು, ತಾಲ್ಲೂಕು ಕೇಂದ್ರಗಳಲ್ಲಿ ತರಬೇತಿ ನೀಡುವ ಬಗ್ಗೆ ದಿನಾಂಕ ನಿಗದಿಪಡಿಸಲಾಗಿದೆ. ಡಿಸೆಂಬರ್ ಅಂತ್ಯದ ವೇಳೆಗೆ ಸಂಪೂರ್ಣ ತರಬೇತಿ ಮುಕ್ತಾಯಗೊಳಿಸಲಾಗುವುದು ಎಂದು ಜಿಲ್ಲಾ ಲಸಿಕಾ ಅಧಿಕಾರಿ ಡಾ.ಎಂ.ಜಿ.ರಾಮ ತಿಳಿಸಿದರು. ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಡಾ.ನವೀನ್ ಭಟ್, ಡಿಎಚ್ಒ ಡಾ.ಸುಧೀರ್ ಚಂದ್ರ ಸೂಡಾ ಇದ್ದರು.















