ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಭಾರತೀಯ ಜನತಾ ಪಕ್ಷದ ತ್ರಾಸಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ತ್ರಾಸಿ ಮಹಾಶಕ್ತಿ ಕೇಂದ್ರದ ಸಭೆ ತ್ರಾಸಿಯ ಅಣ್ಣಪ್ಪಯ್ಯ ಸಬಾಭವನದಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷ ದೀಪಕಕುಮಾರ್ ಶೆಟ್ಟಿ, ಪಕ್ಷವನ್ನು ತಳಮಟ್ಟದಿಂದ ಸಂಘಟಿಸುವ ಉದ್ದೇಶದಿಂದ ಬೂತ್ ಪ್ರಮುಖರನ್ನು, ಶಕ್ತಿ ಕೇಂದ್ರದ ಪ್ರಮುಖರನ್ನು ನೇಮಿಸಲಾಗುತ್ತಿದೆ. ರಾಜ್ಯ ಮತ್ತು ಜಿಲ್ಲಾ ಬಿಜೆಪಿ ಸೂಚನೆಯಂತೆ ಬೈಂದೂರು ಮಂಡಲದಲ್ಲಿ ಪಕ್ಷವನ್ನು ಸಂಘಟಿಸಿ ಬಲಪಡಿಸುವ ಕಾರ್ಯ ನಡೆಯುತ್ತಿದೆ. ಮುಂಬರುವ ದಿನಗಳಲ್ಲಿ ವಿವಿಧ ಮೋರ್ಚಾ ಹಾಗೂ ಪ್ರಮುಖರ ಸಮಾವೇಶಗಳನ್ನು ನಡೆಸಿ ಮುಂಬರುವ ತಾಪಂ., ಜಿಪಂ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸಲಾಗುವುದು ಎಂದು ಹೇಳಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು ಮಾತನಾಡಿ, ಬಿಜೆಪಿ ಕಾರ್ಯಕರ್ತರು ಪಕ್ಷಕ್ಕಾಗಿ ಸ್ವಲ್ಪ ಸಮಯವನ್ನು ನೀಡಿ ಪಕ್ಷದ ಬೆಳವಣಿಗೆಗೆ ಮುಂದಾಗಬೇಕು. ನಮ್ಮಲ್ಲಿರುವ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಪಕ್ಷದ ಬಲವರ್ಧನೆಗೆ ಸಹಕರಿಸಬೇಕು. ಈ ನಿಟ್ಟಿನಲ್ಲಿ ಕಾರ್ಯಕರ್ತರು ಹಗಲಿರುಳು ಶ್ರಮಿಸಬೇಕು ಎಂದರು.
ಜಿಲ್ಲಾ ಪಂಚಾಯತ್ ಸದಸ್ಯೆ ಶೋಭಾ ಜಿ. ಪುತ್ರನ್, ಬಿಜೆಪಿ ಬೈಂದೂರು ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಕಾಶ್ ಪೂಜಾರಿ ಜಡ್ಡು, ಪ್ರಿಯದರ್ಶಿನಿ ದೇವಾಡಿಗ, ಮಂಡಲ ಉಪಾಧ್ಯಕ್ಷ ವಿನೋದ್ ಭಂಡಾರಿ, ತಾಲೂಕು ಪಂಚಾಯತ್ ಸದಸ್ಯರಾದ ನಾರಾಯಣ ಕೆ. ಗುಜ್ಜಾಡಿ, ಸುರೇಂದ್ರ ಖಾರ್ವಿ ಗಂಗೊಳ್ಳಿ, ಮಹಿಳಾ ಮೋರ್ಚಾ ಅಧ್ಯಕ್ಷೆ ಭಾಗೀರಥಿ ಸುರೇಶ್ ಉಪಸ್ಥಿತರಿದ್ದರು. ಇದೇ ಸಂದರ್ಭ ತ್ರಾಸಿ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಶಕ್ತಿ ಕೇಂದ್ರದ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಪದಗ್ರಹಣ ನಡೆಯಿತು.
ತ್ರಾಸಿ ಶಕ್ತಿ ಕೇಂದ್ರದ ಅಧ್ಯಕ್ಷ ಮಿಥುನ್ ದೇವಾಡಿಗ ಸ್ವಾಗತಿಸಿದರು. ತ್ರಾಸಿ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಅಶೋಕ್ ಎನ್.ಡಿ. ಕಾರ್ಯಕ್ರಮ ನಿರೂಪಿಸಿದರು. ಮಹಾಶಕ್ತಿ ಕೇಂದ್ರ ಅಧ್ಯಕ್ಷ ರವಿ ಶೆಟ್ಟಿಗಾರ್ ತ್ರಾಸಿ ವಂದಿಸಿದರು.