ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 5 ದಿನಗಳ ಕಾಲ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿರುವ ಬಗ್ಗೆ ಭಾರತೀಯ ಹವಾಮಾನ ಇಲಾಖೆ, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಿದ್ದು, ಮುಂಜಾಗ್ರತಾ ಕ್ರಮ ವಹಿಸುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಹವಾಮಾನ ಇಲಾಖೆಯ ವರದಿಯಂತೆ, ಮೇ 14 ರಿಂದ 16ರವರೆಗೆ ಮೂರು ದಿನಗಳ ಅವಧಿಯಲ್ಲಿ ಅರಬ್ಬಿ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತದಿಂದ ಹೆಚ್ಚಿನ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲಾ ಅಥವಾ ತಾಲೂಕು ಮಟ್ಟದ ಅಧಿಕಾರಿಗಳು, ನಿಯೋಜನೆಗೊಂಡ ನೋಡೆಲ್ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಕೋಪವನ್ನು ನಿಭಾಯಿಸಲು ತಯಾರಿ ಮಾಡಿಕೊಳ್ಳಬೇಕು. ಮೀನುಗಾರರು ನದಿ, ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕು. ಮಕ್ಕಳು, ಸಾರ್ವಜನಿಕರು ಅಪಾಯಕಾರಿ ವಿದ್ಯುತ್ ಕಂಬ, ಕಟ್ಟಡ, ಮರಗಳ ಹತ್ತಿರ ಅಥವಾ ಕೆಳಗೆ ನಿಲ್ಲದೇ ಸುರಕ್ಷಿತ ಸ್ಥಳಗಳನ್ನು ತಲುಪಬೇಕು ಎಂದಿದ್ದಾರೆ.
ತುರ್ತು ಸೇವೆಗಾಗಿ 1077 ಅಥವಾದೂರವಾಣಿ ಸಂಖ್ಯೆ: 0820-2574802 ಅನ್ನು ಸಂಪರ್ಕಿಸುವಂತೆ ತಿಳಿಸಿದ್ದಾರೆ.