ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ : ಉಡುಪಿ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ, ಪ್ರಾಥಮಿಕ ಆರೋಗ್ಯ ಕೇಂದ್ರ ಗಂಗೊಳ್ಳಿ ಮತ್ತು ಗ್ರಾಮ ಪಂಚಾಯತ್ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಗಂಗೊಳ್ಳಿಯ ಶ್ರೀ ಶಾರದಾ ಮಂಟಪದಲ್ಲಿ ಆಯೋಜಿಸಲಾಗಿದ್ದ ಉಚಿತ ಯೋಗ ಶಿಬಿರವನ್ನು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಮಿತಾ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಯೋಗದಿಂದ ನಮ್ಮ ಜೀವನದಲ್ಲಿ ಬಹಳಷ್ಟು ಪ್ರಯೋಜನ ಪಡೆದುಕೊಳ್ಳಬಹದು. ದೈಹಿಕ ಹಾಗೂ ಮಾನಸಿಕ ಶಕ್ತಿಯನ್ನು ಹೆಚ್ಚಿಸುವುದರ ಜೊತೆಗೆ ದೇಹದಲ್ಲಿ ರೋಗ ನಿರೋಧಕ ಶಕ್ತಿಯ ವರ್ಧನೆಗೆ ಯೋಗ ಸಹಕಾರಿಯಾಗಿದೆ. ಹೀಗಾಗಿ ಪ್ರತಿಯೊಬ್ಬರೂ ಯೋಗಾಭ್ಯಾಸವನ್ನು ಜೀವನದಲ್ಲಿ ಅಳವಡಿಸಿಕೊಂಡು, ಪ್ರತಿನಿತ್ಯ ಸ್ವಲ್ಪ ಸಮಯವನ್ನಾದರೂ ಯೋಗಾಭ್ಯಾಸಕ್ಕೆ ಮೀಸಲಿಡಬೇಕು ಎಂದರು.
ಗಂಗೊಳ್ಳಿ ಗ್ರಾಪಂ ಅಧ್ಯಕ್ಷ ಶ್ರೀನಿವಾಸ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು. ಗ್ರಾಪಂ ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಸದಸ್ಯರಾದ ನಾಗರಾಜ ಖಾರ್ವಿ ಗುಡ್ಡೆಕೇರಿ, ಶಾಂತಿ ಖಾರ್ವಿ, ಶ್ರೀ ಶಾರದೋತ್ಸವ ಸಮಿತಿ ಕಾರ್ಯದರ್ಶಿ ಗೋಪಾಲ ಖಾರ್ವಿ ದಾವನಮನೆ, ಯೋಗ ಶಿಕ್ಷಕಿ ಲತಾ ಹವಾಲ್ದಾರ್ ಮತ್ತಿತರರು ಉಪಸ್ಥಿತರಿದ್ದರು. ಗ್ರಾಪಂ ಸಿಬ್ಬಂದಿ ನಾರಾಯಣ ಶ್ಯಾನುಭಾಗ್ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.