ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ 2021 ರ ಶಿಕ್ಷಕರ ಅರ್ಹತಾ ಪರೀಕ್ಷೆಯು ಆಗಸ್ಟ್ 22ರಂದು ನಡೆಯಲಿದ್ದು, ಪರೀಕ್ಷೆಯು ಸುಸೂತ್ರವಾಗಿ ನಡೆಯುವ ಕುರಿತಂತೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು.
ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಶಿಕ್ಷಕರ ಅರ್ಹತಾ ಪರೀಕ್ಷೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯ ಒಟ್ಟು 9 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಬೆಳಗ್ಗೆ 1176 ಮತ್ತು ಮಧ್ಯಾಹ್ನ 1848 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು, ಎಲ್ಲಾ ಪರೀಕ್ಷಾ ಕೇಂದ್ರಗಳನ್ನು ಸ್ಯಾನಿಟೈಸ್ ಮಾಡುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಕೋವಿಡ್ ಮಾರ್ಗಸೂಚಿಯಂತೆ ಥರ್ಮಲ್ ಸ್ಕಾö್ಯನರ್ ಮೂಲಕ ಪರೀಕ್ಷಿಸುವಂತೆ ಹಾಗೂ ಮಾಸ್ಕ್ ಧರಿಸುವಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಪರೀಕ್ಷಾ ಕೇಂದ್ರಗಳಿಗೆ ಹಾಗೂ ಪ್ರಶ್ನೆಪತ್ರಿಕೆ ಸಾಗಾಟ ವಾಹನಗಳಿಗೆ ಸೂಕ್ತ ಪೊಲೀಸ್ ಭದ್ರತೆ ಒದಗಿಸುವಂತೆ ಪೊಲೀಸ್ ಇಲಾಖೆಗೆ ಸೂಚಿಸಿದ ಜಿಲ್ಲಾಧಿಕಾರಿಗಳು , ಉಡುಪಿ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯ ಅಭ್ಯರ್ಥಿಗಳು ಶಿಕ್ಷಕರ ಅರ್ಹತಾ ಪರೀಕ್ಷೆಗೆ ಹಾಜರಾಗುವಂತೆ ಮತ್ತು ಉತ್ತೀರ್ಣರಾಗುವ ನಿಟ್ಟಿನಲ್ಲಿ , ಮುಂದಿನ ವರ್ಷದಿಂದ ಜಿಲ್ಲೆಯಲ್ಲಿ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಪೆಡ್ನೇಕರ್, ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎನ್.ಹೆಚ್. ನಾಗೂರ , ಜಿಲ್ಲಾ ಖಜಾನಾಧಿಕಾರಿ ಗೋಪಾಲಸ್ವಾಮಿ ಹಾಗೂ ಶಿಕ್ಷಣ ಇಲಾಖೆಯ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.