ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರ ಗಂಗೊಳ್ಳಿ, ರೋಟರಿ ಕ್ಲಬ್ ಗಂಗೊಳ್ಳಿ ಹಾಗೂ ಆದರ್ಶ ಆಸ್ಪತ್ರೆ ಉಡುಪಿ ಇವರ ಜಂಟಿ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಹಿರಿಯ ನಾಗರಿಕರಿಗೆ ಉಚಿತ ಆರೋಗ್ಯ ಕಿಟ್ ವಿತರಣೆ ಕಾರ್ಯಕ್ರಮ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಠಾರದಲ್ಲಿ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿ, ಹಿರಿಯ ನಾಗರಿಕರಿಗೆ ಉಚಿತ ಆರೋಗ್ಯ ಕಿಟ್ ವಿತರಿಸಿ ಮಾತನಾಡಿದ ಬೈಂದೂರು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ, ಆರೋಗ್ಯ ಎಲ್ಲರಿಗೂ ಮುಖ್ಯ. ಮನುಷ್ಯ ಆರೋಗ್ಯವಂತನಾದರೆ ಮಾತ್ರ ದೇಶ ಸದೃಢವಾಗಿ ಬೆಳೆದು ಅಭಿವೃದ್ಧಿ ಪಥದತ್ತ ಸಾಗಲು ಸಾಧ್ಯವಿದೆ. ಜನರ ಆರೋಗ್ಯ ಕಾಪಾಡುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿಯವರು ಅನೇಕ ಯೋಜನೆಗಳನ್ನು ಜಾರಿಗೊಳಿಸಿ ಆರೋಗ್ಯ ಕ್ಷೇತ್ರಕ್ಕೆ ಮಹತ್ತರ ಕೊಡುಗೆಯನ್ನು ನೀಡಿದ್ದಾರೆ. ದೇಶದಾದ್ಯಂತ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರಗಳನ್ನು ತೆರೆದು ಕಡಿಮೆ ಬೆಲೆಯಲ್ಲಿ ಔಷಧಗಳನ್ನು ದೊರೆಯುವಂತೆ ಮಾಡಿದ್ದಾರೆ. ಜನೌಷಧಿ ಕೇಂದ್ರಗಳ ಮೂಲಕ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸಿ ಜನರ ಆರೋಗ್ಯ ಸುಧಾರಣೆ ಬಗ್ಗೆ ಕಾಳಜಿ ವಹಿಸುತ್ತಿರುವ ಪ್ರಧಾನಿ ಮೋದಿಯವರ ಕಾರ್ಯ ಶ್ಲಾಘನೀಯ ಎಂದರು.
ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ರಾಜೇಶ ಎಂ.ಜಿ. ಅಧ್ಯಕ್ಷತೆ ವಹಿಸಿದ್ದರು. ರೋಟರಿ ಜಿಲ್ಲೆ 3182ರ ಅಸಿಸ್ಟೆಂಟ್ ಗವರ್ನರ್ ಜಯಪ್ರಕಾಶ ಶೆಟ್ಟಿ, ಜೋನಲ್ ಲೆಫ್ಟಿನೆಂಟ್ ಕೆ.ರಾಮನಾಥ ನಾಯಕ್, ಉಡುಪಿ ಆದರ್ಶ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ.ಸುದೀಪ್ ಶೆಟ್ಟಿ, ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ಗಂಗೊಳ್ಳಿ ಜನೌಷಧಿ ಕೇಂದ್ರದ ಮಾಲಕಿ ಶರಾವತಿ ಆರ್.ಹೆಗ್ಡೆ, ಮತ್ತಿತರರು ಉಪಸ್ಥಿತರಿದ್ದರು.
ರಾಜೇಶ ಎಂ.ಜಿ. ಸ್ವಾಗತಿಸಿದರು. ಉಪನ್ಯಾಸಕ ನರೇಂದ್ರ ಎಸ್.ಗಂಗೊಳ್ಳಿ ಕಾರ್ಯಕ್ರಮ ನಿರ್ವಹಿಸಿದರು. ರೋಟರಿ ಜತೆ ಕಾರ್ಯದರ್ಶಿ ಕೃಷ್ಣ ಪೂಜಾರಿ ವಂದಿಸಿದರು.