ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಮ್ಯಾನುವಲ್ ಸ್ಕ್ಯಾವೆಂಜರ್ ನಿಷೇಧ ಕಾನೂನನ್ನು ಉಲ್ಲಂಘಿಸಿದರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದರು.
ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮ್ಯಾನುವಲ್ ಸ್ಕ್ಯಾವೆಂಜರ್ ಗಳ ನಿಷೇಧ ಮತ್ತು ಪುನರ್ವಸತಿ ಅಧಿನಿಯಮವು 2013ರಿಂದ ಜಾರಿಗೆ ಬಂದಿದ್ದು, ಈ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು. ಇವುಗಳನ್ನು ಉಲ್ಲಂಘಿಸಿ ಕೆಲಸ ಮಾಡಿಸಿದ್ದಲ್ಲಿ ಅಂತವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.
ಸಫಾಯಿ ಕರ್ಮಾಚಾರಿ ಮತ್ತು ಅವರ ಕುಟುಂಬ ವರ್ಗದವರ ಕಲ್ಯಾಣಕ್ಕಾಗಿ ಸರಕಾರ ಜಾರಿಗೆ ತಂದಿರುವ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕೆಲಸವನ್ನು ಅಧಿಕಾರಿಗಳು ತಪ್ಪದೇ ಮಾಡಬೇಕೆಂದು ತಿಳಿಸಿದ ಅವರು, ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಫಾಯಿ ಕರ್ಮಚಾರಿಗಳಿಗೆ ಸರಕಾರದಿಂದ ಸಿಗುವ ಸೌಲಭ್ಯದ ಬಗ್ಗೆ ಹಾಗೂ ಮ್ಯಾನುವಲ್ ಸ್ಕ್ಯಾವೆಂಜರ್ನಿ ಷೇಧದ ಕುರಿತ ಮಾಹಿತಿ ಕಾರ್ಯಾಗರಾವನ್ನು ನಾಳೆ ಆಯೋಜಿಸಬೇಕು. ಸಾಧ್ಯವಾದಲ್ಲಿ ಅಲ್ಲಿಯೇ ಸರಕಾರದ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದರು.
ನಿವೇಶನ ರಹಿತ ಸಫಾಯಿ ಕರ್ಮಚಾರಿಗಳಿಗೆ ನಿವೇಶನ ಹಂಚಿಕೆ ಮಾಡಲು ಭೂಮಿಗಳನ್ನು ಗುರುತಿಸಿ ಅವರುಗಳಿಗೆ ನೀಡುವ ಕಾರ್ಯವನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕು ಎಂದ ಅವರು ಸಫಾಯಿ ಕರ್ಮಚಾರಿ ಉದ್ಯೋಗವನ್ನು ತ್ಯಜಿಸಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು ಮುಂದಾಗುವಂತವರಿಗೆ ಜಮೀನುಗಳನ್ನು ನೀಡಲು ಡಿ.ಸಿ ಮನ್ನಾ ಜಾಗಗಳನ್ನು ಗುರುತಿಸಲು ಉಪವಿಭಾಗಾಧಿಕಾರಿಗಳಿಗೆ ಸೂಚನೆ ನೀಡಿದರು.
ಗೃಹ ನಿರ್ಮಾಣದ ಯೋಜನೆಗಳಿಗೆ ಆಯ್ಕೆಯಾದ ಸಫಾಯಿ ಕರ್ಮಚಾರಿ ಫಲಾನುಭವಿಗಳಿಗೆ ಅನುದಾನವನ್ನು ಶೀಘ್ರದಲ್ಲಿಯೇ ನೀಡಬೇಕು. ಸ್ಥಳೀಯ ಸಂಸ್ಥೆ ವ್ಯಾಪ್ತಿ ಸೇರಿದಂತೆ ಗ್ರಾಮಾಂತರ ಪ್ರದೇಶಗಳಲ್ಲಿ ಸಫಾಯಿ ಕರ್ಮಚಾರಿ ನೋಂದಾಯಿತ ಸಂಘ ಸಂಸ್ಥೆಗಳಿಗೆ ಸ್ವಚ್ಛತಾ ಕಾರ್ಯಕ್ಕಾಗಿ ಶೇ. 75 ರಷ್ಟು ಸಹಾಯಧನದಲ್ಲಿ ಸಕ್ಕಿಂಗ್ ಯಂತ್ರ ಖರೀದಸಲು ಯೋಜನೆಯನ್ನು ಜಾರಿಗೆ ತಂದಿದೆ. ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
ದ್ರವ ರೂಪದ ತ್ಯಾಜ್ಯವನ್ನು ಸಕ್ಕಿಂಗ್ ಯಂತ್ರಗಳ ಮೂಲಕವೇ ಸ್ವಚ್ಛಗೊಳಿಸುವ ಕಾರ್ಯವನ್ನು ಕೈಗೊಳ್ಳಬೇಕು. ಅವುಗಳನ್ನು ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡಲು ಉಡುಪಿ ನಗರಸಭೆಯವರು ಎಲ್ಲಾ ಸ್ಥಳೀಯ ಸಂಸ್ಥೆಗಳಿಗೆ ಸಹಕರಿಸಬೇಕು ಎಂದು ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ವೈ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಕಿರಣ್ ಫಡ್ನೇಕರ್, ಕುಂದಾಪುರ ಉಪವಿಭಾಗಾಧಿಕಾರಿ ಕೆ. ರಾಜು, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಅನಿತಾ ಮಡ್ಲೂರು ಹಾಗೂ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.