ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಗಂಗೊಳ್ಳಿಯ ಸರ್ವಾಂಗೀಣ ಅಭಿವೃದ್ಧಿ ದೃಷ್ಟಿಯಿಂದ ಅನೇಕ ಯೋಜನೆ, ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗಿದೆ. ಸ್ಥಗಿತಗೊಂಡಿರುವ ಮೀನುಗಾರಿಕಾ ಬಂದರಿನ ಜೆಟ್ಟಿ ಕಾಮಗಾರಿಯನ್ನು ಪುನರಾರಂಭಿಸಲು ಕ್ರಮಕೈಗೊಳ್ಳಲಾಗುವುದು. ಮನೆ ಮನೆಗೆ ಕುಡಿಯುವ ನೀರು ಸರಬರಾಜು ಮಾಡುವ ಯೋಜನೆ ಅನುಮತಿ ದೊರೆತಿದ್ದು, ಆದಷ್ಟು ಶೀಘ್ರ ಸರ್ವೆ ಕಾರ್ಯ ನಡೆಯಲಿದೆ. ಗಂಗೊಳ್ಳಿಯ ಅನೇಕ ರಸ್ತೆಗಳನ್ನು ಕಾಂಕ್ರೀಟಿಕರಣ ಮಾಡಲಾಗಿದ್ದು, ಇಲ್ಲಿನ ಜನರ ಬಹುಬೇಡಿಕೆಯ ರಿಂಗ್ ರೋಡ್ ನಿರ್ಮಾಣದ ಬಗ್ಗೆ ಪ್ರಯತ್ನ ನಡೆಯುತ್ತಿದೆ ಎಂದು ಬೈಂದೂರು ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿ ಹೇಳಿದರು.

ಗಂಗೊಳ್ಳಿಗೆ ಸೋಮವಾರ ಭೇಟಿ ನೀಡಿದ ಅವರು ಗಂಗೊಳ್ಳಿ ಗ್ರಾಮ ಪಂಚಾಯತ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕುಮಾರಸ್ವಾಮಿ ನೇತೃತ್ವದ ಸರಕಾರ, ಯಡಿಯೂರಪ್ಪನವರ ನೇತೃತ್ವದ ಸರಕಾರ ಹಾಗೂ ಬೊಮ್ಮಾಯಿ ನೇತೃತ್ವದ ಸರಕಾರಗಳಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ ನಿರೀಕ್ಷೆಗೂ ಮೀರಿ ಅನುದಾನ ದೊರೆತಿದೆ. ಮುಂದಿನ ದಿನಗಳಲ್ಲಿ ಬಾಕಿ ಉಳಿದಿರುವ ಯೋಜನೆಗಳನ್ನು ಪೂರ್ಣಗೊಳಿಸುವುದರ ಜೊತೆಗೆ ಜನರ ನಿರೀಕ್ಷೆಗಳನ್ನು ಸಾಕಾರಗೊಳಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಅವರು ಹೇಳಿದರು.
ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀನಿವಾಸ ಖಾರ್ವಿ, ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ತಾಪಂ ಮಾಜಿ ಸದಸ್ಯ ಸುರೇಂದ್ರ ಖಾರ್ವಿ, ಗ್ರಾಮ ಪಂಚಾಯತ್ ಪಿಡಿಒ ಉಮಾಶಂಕರ, ಸಣ್ಣ ನೀರಾವರಿ ಇಲಾಖೆಯ ಕಿರಿಯ ಸಹಾಯಕ ಇಂಜಿನಿಯರ್ ಪುನಿತ್, ಗ್ರಾಮಕರಣಿಕ ಮಾಧವ ಕೊಠಾರಿ, ಗಂಗೊಳ್ಳಿ ಗ್ರಾಪಂ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.