ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ರಾಜ್ಯದಲ್ಲಿ ಕೈಗಾರಿಕಾ ವಲಯ ಕೋವಿಡ್-19 ಬಳಿಕ ಚೇತರಿಸಿಕೊಳ್ಳುತ್ತಿದ್ದು, ಸರಕಾರವೂ ಕೈಗಾರಿಕಾ ಕ್ಷೇತ್ರದ ಉತ್ತೇಜನಕ್ಕಾಗಿ ಅಗತ್ಯ ಕ್ರಮ ಕೈಗೊಂಡಿದೆ. ಪ್ರಸ್ತುತ ವರ್ಷ ಕರ್ನಾಟಕ ಕೈಗಾರಿಕಾ ವಲಯದ ಉತ್ತಮ ಪ್ರಗತಿ ಸಾಧಿಸಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್. ನಿರಾಣಿ ಹೇಳಿದರು.
ಅವರು ಭಾನುವಾರ ಸಂಜೆ ಸಹಕಾರ ಸಚಿವ ಎಸ್. ಟಿ. ಸೋಮಶೇಖರ ಅವರೊಂದಿಗೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ ರಾಜ್ಯದಲ್ಲಿ ಉದ್ಯೋಗ ಸೃಷ್ಟಿಗಾಗಿ ಹಲವು ಕ್ರಮಗಳನ್ನು ಕೈಗೊಂಡಿದ್ದು, ಹೊಸ ಕೈಗಾರಿಕಾ ವಲಯ, ಒಂದು ದೇಶ ಒಂದು ಪ್ರಾಡೆಕ್ಟ್ ಯೋಜನೆ, ಹೂಡಿಕೆದಾರ ಸ್ನೇಹಿ ನಿಯಮಗಳ ಮಾರ್ಪಾಡು, ಕಡಿಮೆ ಬಡ್ಡಿದರದಲ್ಲಿ ಸಾಲ ಮೊದಲಾದ ಯೋಜನೆಯನ್ನು ಕೈಗೊಳ್ಳಲಾಗಿದೆ. ಇತರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ ಕೈಗಾರಿಕಾ ಪ್ರಗತಿಯಲ್ಲಿ ದೇಶದಲ್ಲಿಯೇ ಮೊದಲ ಸ್ಥಾನದಲ್ಲಿದೆ ಎಂದರು.
ಈ ಸಂದರ್ಭ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್, ನಿರ್ದೇಶಕರಾದ ದೇವಿಪ್ರಸಾದ್ ಶೆಟ್ಟಿ ಬೆಳಪು, ಮಹೇಶ್ ಹೆಗ್ಡೆ, ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆರಾಡಿ ಚಂದ್ರಶೇಖರ ಶೆಟ್ಟಿ, ಸದಸ್ಯರಾದ ಜಯಾನಂದ ಹೋಬಳಿದಾರ್, ಡಾ. ಅತುಲ್ ಕುಮಾರ್, ಶೆಟ್ಟಿ, ಗೋಪಾಲಕೃಷ್ಣ, ಸಂಧ್ಯಾ ರಮೇಶ್, ರತ್ನಾ ರಮೇಶ್ ಕುಂದರ್, ಬೈಂದೂರು ತಹಶಿಲ್ದಾರ್ ಶೋಭಾಲಕ್ಷ್ಮೀ ಎಚ್. ಎಸ್., ಕಾರ್ಯನಿರ್ಹಣಾಧಿಕಾರಿ ಎಸ್.ಪಿ.ಬಿ ಮಹೇಶ್, ಸಹಕಾರಿ ಸಂಘಗಳ ಉಪನಿಬಂಧಕ ಪ್ರವೀಣ ಬಿ. ನಾಯಕ್, ಕೊಲ್ಲೂರು ಗ್ರಾ.ಪಂ ಅಧ್ಯಕ್ಷ ಶಿವರಾಮಕೃಷ್ಣ ಭಟ್ ಮೊದಲಾದವರು ಉಪಸ್ಥಿತರಿದ್ದರು.
ಇದನ್ನೂ ಓದಿ:
► ಸಣ್ಣ ರೈತರ ಟ್ರ್ಯಾಕ್ಟರ್‌ಗಳಿಗೆ ಡೀಸೆಲ್ ಸಬ್ಸಿಡಿ: ಸಚಿವ ಬಿ.ಸಿ ಪಾಟೀಲ್ – https://kundapraa.com/?p=58386 .












