ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ,ಎ.8: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನೇತೃತ್ವದಲ್ಲಿ ಏ.14ರಿಂದ 16ರ ತನಕ ಕುಂದಾಪುರದಲ್ಲಿ ‘ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ’ ಹಮ್ಮಿಕೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾ ಕಸಾಪ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಹೇಳಿದರು.
ಪತ್ರಿಕಾಗೋಷ್ಠಿ ಯಲ್ಲಿ ಅವರು ಮಾತನಾಡಿ, ಕುಂದಾಪುರ ಜೂನಿಯರ್ ಕಾಲೇಜು ಸಭಾಂಗಣದಲ್ಲಿ ಸಮ್ಮೇಳನ ಆಯೋಜಿಸಲಾಗಿದ್ದು ಏ.14ರಂದು ಅಂಬೇಡ್ಕರ್ ಜಯಂತಿ ಹಿನ್ನೆಲೆಯಲ್ಲಿ ಅಪರಾಹ್ನದ ಬಳಿಕ ಅಂಬೇಡ್ಕರ್ ಭಾವನಮನದೊಂದಿಗೆ ಸಮ್ಮೇಳನಕ್ಕೆ ಚಾಲನೆ ದೊರಕಲಿದೆ.
ಏ.15ರಂದು ಬೆಳಗ್ಗೆ ಧ್ವಜಾರೋಹಣ, ಮೆರವಣಿಗೆಯೊಂದಿಗೆ ಸಮ್ಮೇಳನದ ಉದ್ಘಾಟನೆ ನೆರವೇರಲಿದ್ದು ಹಿರಿಯ ಸಾಹಿತಿ, ಸಂಶೋಧಕ ಪ್ರೋ. ಎ.ವಿ. ನಾವಡ ಅವರು ಸರ್ವಾಧ್ಯಕ್ಷತೆ ವಹಿಸಲಿದ್ದಾರೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ ಸಮ್ಮೇಳನ ಉದ್ಘಾಟಿಸುವರು. ಸಮ್ಮೇಳನದಲ್ಲಿ ವಿವಿಧ ಗೋಷ್ಠಿಗಳು, ಕವಿಗೋಷ್ಠಿ ಜರುಗಲಿದೆ. ಸಾಧಕರಿಗೆ ಗೌರವ, ಪುಸ್ತಕ ಬಿಡುಗಡೆ ಸೇರಿದಂತೆ ಕನ್ನಡ ನಾಡು ನುಡಿಗೆ ಸಂಬಂಧಿಸಿದ ಚಟುವಟಿಕೆಗಳು ನಡೆಯಲಿದೆ. ಕುಂದಗನ್ನಡ ಭಾಷೆ, ಸಂಸ್ಕೃತಿಯ ವೈಶಿಷ್ಟತೆ ಸಮ್ಮೇಳನದ ಮೂಲಕ ಸಾರಲಾಗುತ್ತದೆ. ಡಾ.ಬಾಲಕೃಷ್ಣ ಶೆಟ್ಟಿ ಸಮ್ಮೇಳನದ ಸಮಾರೋಪ ನುಡಿಗಳನ್ನಾಡುವರು. ಎಂದು ಅವರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಸಾಪ ಕೋಶಾಧಿಕಾರಿ ಮನೋಹರ್ ಪಿ, ಕಸಾಪ ಕುಂದಾಪುರ ತಾಲೂಕು ಘಟಕದ ಅಧ್ಯಕ್ಷ ಡಾ. ಉಮೇಶ್ ಪುತ್ರನ್, ಕಾರ್ಯದರ್ಶಿ ದಿನಕರ ಆರ್. ಶೆಟ್ಟಿ ಉಪಸ್ಥಿತರಿದ್ದರು.