ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಖಾಸಗಿ ಶಾಲೆಗಳ ಪೈಪೋಟಿ ಹಾಗೂ ಅಬ್ಬರದ ನಡುವೆ ಸರಕಾರಿ ಶಾಲೆಗಳು ಉತ್ತಮ ಸಾಧನೆ ಮಾಡುತ್ತಿದ್ದು, ಸರಕಾರಿ ಶಾಲೆಗಳಲ್ಲಿನ ಮೂಲಭೂತ ಸೌಲಭ್ಯ ಹಾಗೂ ಶಿಕ್ಷಣದ ಗುಣಮಟ್ಟದಿಂದ ಸರಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಾಗುತ್ತಿದೆ ಎಂದು ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿಯ ಸಮನ್ವಯಾಧಿಕಾರಿ ಸದಾನಂದ ಬೈಂದೂರು ಹೇಳಿದರು.
ಮೇಲ್‌ಗಂಗೊಳ್ಳಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹಾಗೂ ಹಳೆ ವಿದ್ಯಾರ್ಥಿ ಸಂಘದ ಜಂಟಿ ಆಶ್ರಯದಲ್ಲಿ ಶನಿವಾರ ಜರುಗಿದ ಕಂಪ್ಯೂಟರ್ ಕ್ಲಾಸ್ ಉದ್ಘಾಟನೆ ಮತ್ತು ಸಮುದಾಯದತ್ತ ಶಾಲೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ ಅವರು ಸಚಿವ ಕೋಟ ಶ್ರೀನಿವಾಸ ಪೂಜಾರಿ ಶಿಫಾರಸ್ಸಿನ ಮೇರೆಗೆ ಸಮಾಜ ಕಲ್ಯಾಣ ಇಲಾಖೆಯಿಂದ ಮಂಜೂರಾದ ಎರಡು ಕಂಪ್ಯೂಟರ್‌ಗಳನ್ನು ಉದ್ಘಾಟಿಸಿ ಶಾಲೆಗೆ ಹಸ್ತಾಂತರಿಸಿದರು.
ಗ್ರಾಪಂ ಉಪಾದ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಸದಸ್ಯ ಬಿ.ರಾಘವೇಂದ್ರ, ನಿವೃತ್ತ ಮುಖ್ಯೋಪಾಧ್ಯಾಯ ರಮೇಶ ಮಹಾಲೆ, ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಸದಾಶಿವ ಖಾರ್ವಿ ಕಂಚುಗೋಡು ಶುಭಾಶಂಸನೆಗೈದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಶಾಲೆಯ ಅಕ್ಷರದಾಸೋಹ ಸಿಬ್ಬಂದಿಗಳಾದ ಶಕುಂತಲಾ ಮತ್ತು ಶಾರದಾ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಗ್ರಾಪಂ ಸದಸ್ಯೆ ಶಾಂತಿ ಖಾರ್ವಿ, ಜಿಎಫ್‌ಸಿಎಸ್ ನಿರ್ದೇಶಕ ಚಂದ್ರ ಖಾರ್ವಿ, ಶ್ರೀ ಬಸವೇಶ್ವರ ದೇವಸ್ಥಾನದ ಅರ್ಚಕ ಜಗದೀಶ ಎಂ.ಜಿ., ಎಸ್‌ಡಿಎಂಸಿ ಅಧ್ಯಕ್ಷ ರಾಘವೇಂದ್ರ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜಿ.ಈಶ್ವರ ಉಪಸ್ಥಿತರಿದ್ದರು.
ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಲಲಿತಾ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಗೌರವ ಶಿಕ್ಷಕಿಯರಾದ ಸುಪ್ರೀತಾ ಕಾರ್ಯಕ್ರಮ ನಿರ್ವಹಿಸಿ, ಸುಜಾತಾ ವಂದಿಸಿದರು.